ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಗಡಿ ನಾಡಿನ ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಕಾರವಾರದಲ್ಲಿ ಗಡಿನಾಡ ಕರಾವಳಿ ಉತ್ಸವ ಆಯೋಜಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಅಕ್ಷಯ್ ನಾಗೇಕರ್ ತಿಳಿಸಿದರು.

Banner Ad

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಉತ್ಸವದ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಡಿಸೆಂಬರ್ 15ರಿಂದ 31ರವರೆಗೆ ನಗರದ ಮಯೂರವರ್ಮ ವೇದಿಕೆಯಲ್ಲಿ ಉತ್ಸವ ನಡೆಯಲಿದೆ ಎಂದರು.

ಉತ್ಸವದ ಆರಂಭಿಕ ಒಂದು ವಾರ ವೇದಿಕೆ ಕಾರ್ಯಕ್ರಮಗಳು ನಡೆಯಲಿದ್ದು, ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ, ರ‍್ಯಾಪ್ ಗಾಯಕ ಅಲೋಕ್, ಐಶ್ವರ್ಯ ರಂಗರಾಜನ್, ಜೇನ ಧನಿಯೋಳೆ, ‘ಮೀನ ಕಣ್ಣೊಳೆ’ ಹಾಡಿನ ಗಾಯಕ ಜಸ್ಕರಣ್ ಸಿಂಗ್ ಸೇರಿದಂತೆ ಹಲವು ಖ್ಯಾತ ಕಲಾವಿದರು ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ. ಕನ್ನಡದ ಹಾಡುಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಗಾಯಕರಲ್ಲಿ ಮನವಿ ಮಾಡಲಾಗಿದೆ ಎಂದರು.

ಸುಮಾರು ₹70 ಲಕ್ಷ ವೆಚ್ಚದಲ್ಲಿ ಉತ್ಸವ ಆಯೋಜಿಸಲಾಗುತ್ತಿದ್ದು, ಡಿಐಡಿ ಕಾರ್ಯಕ್ರಮದ ರಾಜ್ಯದ ವಿವಿಧ ಕಲಾವಿದರು ಭಾಗವಹಿಸಲಿದ್ದಾರೆ. ರಾಷ್ಟ್ರಮಟ್ಟದ ದೇಹದಾರ್ಢ್ಯ ಸ್ಪರ್ಧೆಯನ್ನೂ ಆಯೋಜಿಸಲಾಗುವುದು. ಸಂಗೀತ ಕಾರ್ಯಕ್ರಮಗಳ ಜತೆಗೆ ನಾಡಿನ ಕಲೆ, ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಸ್ಥಳೀಯ ಜಾನಪದ ಕಲಾ ತಂಡಗಳಿಗೆ ಪ್ರದರ್ಶನ ನೀಡಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ಉತ್ಸವದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಆಹಾರ ಮಳಿಗೆಗಳಿಗೂ ಅವಕಾಶ ನೀಡಲಾಗಿದ್ದು, ಒಟ್ಟು 15 ದಿನಗಳ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ ಎಂದು ಅಕ್ಷಯ್ ನಾಗೇಕರ್ ತಿಳಿಸಿದರು.

ಉದ್ಘಾಟನಾ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರನ್ನು ಆಹ್ವಾನಿಸುವ ಚಿಂತನೆ ಇದೆ. ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕೃಷ್ಣ ಬಂಟ, ಸಂತೋಷ ನಾಯ್ಕ, ಚೇತನ ಕೋಚರೇಕರ್, ಹಸನ್, ಅಜೀಂ ಶೇಖ್ ಹಾಗೂ ಬ್ರಿಜೆಶ್ ನಾಯ್ಕ ಉಪಸ್ಥಿತರಿದ್ದರು.

 

Please Share: