ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಬಸವಣ್ಣನವರ ಅನುಭವ ಮಂಟಪ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳಿಂದ ದೇಶದಲ್ಲಿ ಸಮಾನತೆ ಮತ್ತು ಸಹಬಾಳ್ವೆ ಸಾಧ್ಯವಾಗಿದೆ. ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಿದಾಗ ಮಾತ್ರ ಈ ಮೌಲ್ಯಗಳು ಉಳಿಯಲು ಸಾಧ್ಯ ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು.

Banner Ad

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಜಿಲ್ಲಾಡಳಿತ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ–2026ರ ಅಂಗವಾಗಿ ಆಯೋಜಿಸಿದ್ದ ‘ಪ್ರಜಾಪ್ರಭುತ್ವದಲ್ಲಿ ಯುವ ಸಂಸತ್ತು’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅನುಭವ ಮಂಟಪದಲ್ಲಿ ಎಲ್ಲ ವರ್ಗದವರಿಗೆ, ವಿಶೇಷವಾಗಿ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿದ್ದ ಬಸವಣ್ಣನವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ. ಯುವಜನರಲ್ಲಿ ಪ್ರಜಾಪ್ರಭುತ್ವದ ಮೌಲ್ಯ, ಶಾಂತಿ ಹಾಗೂ ಸಹಬಾಳ್ವೆಯ ಕುರಿತು ಅರಿವು ಮೂಡಿಸಬೇಕು ಎಂದರು.

ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯುನಿಕೇಷನ್ ಆ್ಯಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಅಧ್ಯಕ್ಷ ಸತೀಶ್ ಕೆ. ಸೈಲ್ ಮಾತನಾಡಿ, ಜನರಿಂದ, ಜನರಿಗಾಗಿ ಇರುವ ವ್ಯವಸ್ಥೆಯೇ ಪ್ರಜಾಪ್ರಭುತ್ವ. ಜನಪ್ರತಿನಿಧಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿದಾಗ ಮಾತ್ರ ಪ್ರಜಾಪ್ರಭುತ್ವ ದಿನಾಚರಣೆಗೆ ಅರ್ಥ ಬರುತ್ತದೆ ಎಂದರು.

ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮಾತನಾಡಿ, ಪ್ರತಿಯೊಬ್ಬರೂ ಸಂವಿಧಾನದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದೊರೆತ ಹಕ್ಕು–ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಜಿಲ್ಲೆಯ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಒಂದು ತಿಂಗಳ ಕಾಲ ಯುವ ಸಂವಾದ ಸಭೆಗಳನ್ನು ನಡೆಸಿ, ವಿವಿಧ ಇಲಾಖೆಗಳ ಯೋಜನೆ–ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು. ಮತದಾರರ ಪಟ್ಟಿಯ ಹೊಸ ನೋಂದಣಿ, ತಿದ್ದುಪಡಿ ಹಾಗೂ ಸ್ಥಳಾಂತರಕ್ಕೆ ಸೆ.23ರವರೆಗೆ ಅವಕಾಶವಿದೆ ಎಂದರು.

ಕಾರ್ಯಕ್ರಮದಲ್ಲಿ ಅಂಕೋಲಾ ಗೋಖಲೆ ಸೆಂಟಿನರಿ ಕಾಲೇಜಿನ ಪ್ರಾಚಾರ್ಯ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸದಸ್ಯ ಡಾ. ಸಿದ್ದಲಿಂಗಸ್ವಾಮಿ ವಿ. ವಸ್ತ್ರದ ಅವರು ‘ಯುವ ಸಂಪತ್ತು’ ಕುರಿತು ವಿಶೇಷ ಉಪನ್ಯಾಸ ನೀಡಿದರು.

 

 

 

Please Share: