ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಮೂರು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಯೋಜನೆಗೆ ಇನ್ನಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವೇಗ ನೀಡಬೇಕು ಎಂದು ಕಾರವಾರದ ರಾಜಸ ಸದಾನಂದ ತೋಡೂರು ಆಗ್ರಹಿಸಿದ್ದಾರೆ.

Banner Ad

ಕಾಣದ ಕೈಗಳ ಕೈವಾಡ, ನಕಲಿ ಪರಿಸರವಾದಿಗಳ ಷಡ್ಯಂತ್ರ ಹಾಗೂ ಜನಪ್ರತಿನಿಧಿಗಳ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಯೋಜನೆ ದಶಕಗಳಿಂದ ವಿಳಂಬವಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಾಗೂ ರೈಲ್ವೆ ಇಲಾಖೆ ಬಾಕಿ ಇರುವ ಅಡೆತಡೆಗಳನ್ನು ನಿವಾರಿಸಿ, ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. ಪರಿಸರ, ಅರಣ್ಯ ಹಾಗೂ ವನ್ಯಜೀವಿಗಳಿಗೆ ಹೆಚ್ಚಿನ ಹಾನಿಯಾಗದಂತೆ ವೈಜ್ಞಾನಿಕವಾಗಿ ಯೋಜನೆ ರೂಪಿಸಿ, ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಕಾಮಗಾರಿ ಶೀಘ್ರ ಆರಂಭಿಸಬೇಕು. ನಿಗದಿತ ಕಾಲಮಿತಿಯಲ್ಲಿ ಯೋಜನೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಧಾನಿ ಹಾಗೂ ಕರ್ನಾಟಕದ ಮುಖ್ಯಮಂತ್ರಿ ತಮ್ಮ ಅಧಿಕಾರಾವಧಿಯಲ್ಲೇ ಜಂಟಿಯಾಗಿ ರೈಲು ಮಾರ್ಗವನ್ನು ಉದ್ಘಾಟಿಸಬೇಕು ಎಂಬುದು ಕನ್ನಡಿಗರ ಆಶಯವಾಗಿದೆ.

ಮೂಲಸೌಕರ್ಯ, ಆರೋಗ್ಯ, ಶಿಕ್ಷಣ, ಪ್ರವಾಸೋದ್ಯಮ ಹಾಗೂ ಸಾರಿಗೆ ಕ್ಷೇತ್ರಗಳಲ್ಲಿ ಉತ್ತರ ಕನ್ನಡ ಜಿಲ್ಲೆ ಹಿಂದುಳಿದಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ವಿದ್ಯಾವಂತರು ಹಾಗೂ ಪ್ರಜ್ಞಾವಂತ ನಾಗರಿಕರು ಚರ್ಚೆ, ಸಂವಾದಗಳಲ್ಲಿ ತೊಡಗಿಸಿಕೊಂಡು ನ್ಯಾಯಯುತ ಹೋರಾಟ ನಡೆಸಬೇಕು. ಇನ್ನಾದರೂ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ಯೋಜನೆಗೆ ವೇಗ ನೀಡುವರೇ ಎಂದು ಅವರು ಪ್ರಶ್ನಿಸಿದ್ದಾರೆ.

 

Please Share: