ಕರಾವಳಿ ವಾಯ್ಸ್ ನ್ಯೂಸ್
ಅಂಕೋಲಾ: ತಾಲೂಕಿನ ತೆಂಕಣಕೇರಿ ಗ್ರಾಮದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ರಾತ್ರಿ ವಿದ್ಯುತ್ ಸರ್ಕ್ಯೂಟ್ ದೋಷದಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.
ರಾತ್ರಿ ವೇಳೆ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರಲ್ಲಿ ಆತಂಕ ಮೂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಲೆ ಪುನರಾರಂಭವಾಗಬೇಕಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಬೆಂಕಿಯಿಂದ ಕಟ್ಟಡ, ಪೀಠೋಪಕರಣಗಳು ಹಾಗೂ ಶೈಕ್ಷಣಿಕ ಉಪಕರಣಗಳಿಗೆ ಉಂಟಾಗಿರುವ ಹಾನಿಯ ಪ್ರಮಾಣ ಇನ್ನಷ್ಟೇ ತಿಳಿದುಬರಬೇಕಿದೆ. ಅಧಿಕಾರಿಗಳ ಪರಿಶೀಲನೆಯ ಬಳಿಕ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿಯಲಿದೆ.


