ಕರಾವಳಿ ವಾಯ್ಸ್ ನ್ಯೂಸ್
ದಾಂಡೇಲಿ: ನಗರದ ಸಮೀಪದ ಹಾಲಮಡ್ಡಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ಭಾನುವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳೀಯರ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ.
ಹಾಲಮಡ್ಡಿ ನಿವಾಸಿ ಹಂಝಾಸಾಬ ವರ್ದಿ ಅವರಿಗೆ ಸೇರಿರುವ ಈ ಮನೆಯನ್ನು ಮಲ್ಲಿಕಾರ್ಜುನ ಎಂಬಾತನಿಗೆ ಬಾಡಿಗೆಗೆ ನೀಡಲಾಗಿತ್ತು. ಮನೆಯ ಮಾಲಕ ಹಂಝಾಸಾಬ ವರ್ದಿ ಅವರು ಮಾಧ್ಯಮಕ್ಕೆ ನೀಡಿದ ಮಾಹಿತಿಯಂತೆ, ಬಾಡಿಗೆದಾರ ಮಲ್ಲಿಕಾರ್ಜುನನೇ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿ ಮನೆಗೆ ಬೀಗ ಹಾಕಿ ತೆರಳಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮನೆಯೊಳಗಿನ ಕಬಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ.
ಬೆಂಕಿ ಕಾಣುತ್ತಿದ್ದಂತೆ ಸ್ಥಳೀಯರು ತಕ್ಷಣ ಮನೆ ಬಾಗಿಲು ಒಡೆದು ಒಳಗೆ ಪ್ರವೇಶಿಸಿ, ಸಂಭವಿಸಬಹುದಾದ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ. ಮಾಹಿತಿ ಪಡೆದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿತು.
ಘಟನಾ ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ ಮುಂದಿನ ಕ್ರಮ ಕೈಗೊಂಡಿದ್ದಾರೆ.
