ಕರಾವಳಿ ವಾಯ್ಸ್ ನ್ಯೂಸ್ 

ಅಂಕೋಲಾ: ಪಟ್ಟಣದ ಸಾರ್ವಜನಿಕ ಸ್ಥಳದಲ್ಲಿಯೇ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

Banner Ad

ಭಾನುವಾರ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅಂಕೋಲಾ ಪೊಲೀಸ್ ಠಾಣೆಯ ಉಪನಿರೀಕ್ಷಕ ಗುರುನಾಥ ಬಿ. ಹಾದಿಮನಿ ಅವರು ಗಸ್ತು ತಿರುಗುತ್ತಿದ್ದರು. ಬೆಳಿಗ್ಗೆ ಸುಮಾರು 10:30ರ ವೇಳೆಗೆ ರೆಹಮಾನಿಯಾ ಮಸೀದಿ ಸಮೀಪ ಗಸ್ತಿನಲ್ಲಿದ್ದ ವೇಳೆ ಬಾತ್ಮಿದಾರನೊಬ್ಬ ಅವರನ್ನು ಸಂಪರ್ಕಿಸಿ ಗಾಂಜಾ ಮಾರಾಟ ನಡೆಯುತ್ತಿರುವ ಕುರಿತು ಮಹತ್ವದ ಮಾಹಿತಿ ನೀಡಿದ್ದಾನೆ.

ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಮನೀಷ್ ಹೋಟೆಲ್ ಎದುರಿನ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬ ಕಳೆದ ಕೆಲವು ದಿನಗಳಿಂದ ಗಾಂಜಾ ತಂದು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆ ಎಂದು ಮಾಹಿತಿ ದೊರೆತಿದೆ. ಅದೇ ವ್ಯಕ್ತಿ ಭಾನುವಾರ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯ ನಡುವೆ ಕಪ್ಪು ಬಣ್ಣದ ಶರ್ಟ್ ಧರಿಸಿ ಅಲ್ಲಿಗೆ ಬಂದು ಗಾಂಜಾ ಮಾರಾಟ ಮಾಡುವ ಸಾಧ್ಯತೆ ಇದೆ ಎಂದು ಮಾಹಿತಿದಾರ ತಿಳಿಸಿದ್ದಾನೆ.

ಈ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿದ ಪಿಎಸ್‌ಐ ಗುರುನಾಥ ಹಾದಿಮನಿ ಅವರು ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ದೂರು ದಾಖಲಿಸಿದ್ದಾರೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ 1985ರ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.

 

 

Please Share: