ಕರಾವಳಿ ವಾಯ್ಸ್ ನ್ಯೂಸ್

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಂತಸದ ಸುದ್ದಿ ಬಂದಿದೆ. ಇನ್ಮುಂದೆ SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಪಾಸ್ ಆಗಲು ಕನಿಷ್ಠ ಶೇಕಡಾ 33 ಅಂಕ ಗಳಿಸಿದರೆ ಸಾಕು ಎಂದು ಸರ್ಕಾರ ತೀರ್ಮಾನಿಸಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಕುರಿತು ಘೋಷಣೆ ಮಾಡಿದ್ದು, “ಹಿಂದಿನಂತೆ 35 ಅಂಕ ಬದಲು ಇದೀಗ 33 ಅಂಕ ಬಂದ್ರೇ ಪಾಸ್. ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಅಭಿಪ್ರಾಯವನ್ನು ಪಡೆದು ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿಯಲ್ಲಿ ಒಟ್ಟು 600 ಅಂಕಗಳಲ್ಲಿ 198 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣರಾಗಲಿದ್ದಾರೆ. ಸಾರ್ವಜನಿಕರಿಂದ ಬಂದ 709 ಅಭಿಪ್ರಾಯಗಳಲ್ಲಿ 701 ಮಂದಿ 33 ಅಂಕ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಸಚಿವರು ಹೇಳಿದರು.

ಕನ್ನಡ ಭಾಷೆಗೆ ನಿಗದಿಯಾಗಿರುವ 125 ಅಂಕವನ್ನು 100ಕ್ಕೆ ಇಳಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಈ ಕುರಿತು ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಿ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಹೊಸ ನಿಯಮ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿಯಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸರ್ಕಾರದಿಂದ ಈ ಕುರಿತು ನಾಳೆ ಅಧಿಕೃತ ಅಧಿಸೂಚನೆ ಹೊರಬೀಳಲಿದೆ.

 

 

Please Share: