ಕರಾವಳಿ ವಾಯ್ಸ್ ನ್ಯೂಸ್
ಹಳಿಯಾಳ: ಮುರ್ಕವಾಡ ಜಾತ್ರೆಯಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ ಮಂಗಳಸೂತ್ರ ಕಿತ್ತುಕೊಂಡು ಪರಾರಿಯಾಗಿದ್ದ ಪ್ರಕರಣವನ್ನು ಹಳಿಯಾಳ ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಮ್ಮನಕೊಪ್ಪ ಗ್ರಾಮದ ಅಕ್ಷತಾ ಮಂಜುನಾಥ ಕುಂಬಾರ (30) ಅವರು ಫೆಬ್ರುವರಿ 9ರಂದು ಪತಿ ಹಾಗೂ ಮಗಳೊಂದಿಗೆ ಮುರ್ಕವಾಡ ಜಾತ್ರೆಗೆ ತೆರಳಿದ್ದರು. ಜಾತ್ರೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಲೈಟ್ ಕಂಬದ ಸಮೀಪ ಅಪರಿಚಿತ ವ್ಯಕ್ತಿಯೊಬ್ಬರು ಅವರ ಕೊರಳಲ್ಲಿದ್ದ ಸುಮಾರು 30 ಗ್ರಾಂ ತೂಕದ ಚಿನ್ನದ ಮಂಗಳಸೂತ್ರವನ್ನು ಕಿತ್ತುಕೊಂಡು ಪರಾರಿಯಾಗಿದ್ದ. ಈ ಕುರಿತು ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಗಾಗಿ ವಿಶೇಷ ತಂಡ ರಚಿಸಿದ್ದ ಪೊಲೀಸರು ತಾಂತ್ರಿಕ ಮಾಹಿತಿ ಹಾಗೂ ಖಚಿತ ಸುಳಿವಿನ ಆಧಾರದ ಮೇಲೆ ಆಗಸ್ಟ್ 8ರಂದು ಕಾರ್ಯಾಚರಣೆ ನಡೆಸಿ, ಕಾವಲವಾಡ ಹಾಗೂ ಹೊಸ ಹಡಗಲಿ ಗ್ರಾಮಗಳಲ್ಲಿ ಮೂವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಹೊಸ ಹಡಗಲಿಯ ಶಶಿಧರ ಉಳವಪ್ಪ ಬಾರ್ಕಿ, ಕೆ.ಕೆ.ಹಳ್ಳಿಯ ಕಿರಣ ಧರ್ಮರಾಜ್ ಗೋಡಿಮನಿ ಹಾಗೂ ಹಳಿಯಾಳ ಮಡ್ಡಿಯ ವಾಸಿಮ್ ಶಿರಾಜುದ್ದೀನ್ ಚವಾಣ್ ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ಆರೋಪಿಗಳು ಜಾತ್ರೆಯಲ್ಲಿ ಮಂಗಳಸೂತ್ರ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಂದ ₹4.50 ಲಕ್ಷ ಮೌಲ್ಯದ 30 ಗ್ರಾಂ ಚಿನ್ನದ ಮಂಗಳಸೂತ್ರ ಹಾಗೂ ಕೃತ್ಯಕ್ಕೆ ಬಳಸಿದ್ದ ₹50 ಸಾವಿರ ಮೌಲ್ಯದ ಪ್ಯಾಶನ್ ಪ್ರೊ ಬೈಕ್ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಎಸ್ಪಿ ದೀಪನ್ ಎಂ.ಎನ್., ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಹಾಗೂ ದಾಂಡೇಲಿ ಡಿವೈಎಸ್ಪಿ ಶಿವಾನಂದ ಮದರಕಂಡಿ ಅವರ ಮಾರ್ಗದರ್ಶನದಲ್ಲಿ, ಹಳಿಯಾಳ ಸಿಪಿಐ ಜಯಪಾಲ್ ಪಾಟೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಪಿಎಸ್ಐಗಳಾದ ಕೃಷ್ಣಗೌಡ ಅರಕೇರಿ, ಮಹೇಶ ಮಾಳಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಹಾಗೂ ಕಾರವಾರ ತಾಂತ್ರಿಕ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ತಂಡದ ಕಾರ್ಯಕ್ಕೆ ಎಸ್ಪಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

