ಕರಾವಳಿ ವಾಯ್ಸ್ ನ್ಯೂಸ್
ಅಂಕೋಲಾ: ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಮಾದನಗೇರಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿಯ ಡಿಕ್ಕಿಗೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಂಕೋಲಾ ತಾಲೂಕಿನ ಮಾದನಗೇರಿ ಹಿಲ್ಲೂರು ಕ್ರಾಸ್ ಬಳಿ ಘಟನೆ ನಡೆದಿದ್ದು, ಅಂಕೋಲಾದಿಂದ ಕುಮಟಾ ಕಡೆಗೆ ತೆರಳುತ್ತಿದ್ದ ಲಾರಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಆಟೋ ಗುರುತಿಸಲಾಗದಷ್ಟು ಜಖಂಗೊಂಡಿದೆ.
ಅದೃಷ್ಟವಶಾತ್ ಅಪಘಾತದ ವೇಳೆ ಆಟೋದಲ್ಲಿ ಯಾರೂ ಇರಲಿಲ್ಲ. ಹೀಗಾಗಿ ಸಂಭವಿಸಬಹುದಾಗಿದ್ದ ಭಾರೀ ಪ್ರಾಣಾಪಾಯ ತಪ್ಪಿದೆ. ಘಟನೆಯಲ್ಲಿ ಲಾರಿಯ ಕ್ಲೀನರ್ ಗಾಯಗೊಂಡಿದ್ದಾನೆ.
ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


