ಕರಾವಳಿ ವಾಯ್ಸ್ ನ್ಯೂಸ್
ಉಡುಪಿ: ಕಾಪು ತಾಲೂಕಿನ ಮುದ್ರಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಗ್ರಾಪಂ ಮಾಜಿ ಅಧ್ಯಕ್ಷ, ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪರಾರಿಯಾಗುವ ವೇಳೆ ಪೊಲೀಸರ ಮೇಲೆ ಗುಂಡು ಹಾರಿಸಲು ಮುಂದಾದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
ಉತ್ತರ ಪ್ರದೇಶದ ರಾಜು (42), ಉತ್ತರಾಖಂಡದ ಅಜಯ್ ರಸ್ತೋಗಿ ಅಲಿಯಾಸ್ ಅನ್ನೋಲ್ (23) ಹಾಗೂ ಬಿಹಾರದ ಜಿಯಾಹುಲ್ ವಜೂಲ್ ಶೇಖ್ ಅಲಿಯಾಸ್ ದೀಪಕ್ (38) ಬಂಧಿತರು. ಆ.7ರಂದು ಮಧ್ಯಾಹ್ನ 3.45ರ ಸುಮಾರಿಗೆ ಮುದ್ರಂಗಡಿಯ ಸೇಂಟ್ ಕ್ಷೇವಿಯರ್ ಚರ್ಚ್ ಸಂಕೀರ್ಣದಲ್ಲಿ ಡೇವಿಡ್ ಡಿಸೋಜಾ ಹತ್ಯೆ ನಡೆದಿತ್ತು.
ತನಿಖೆ ವೇಳೆ ಆರೋಪಿಗಳು ಬಸ್ಸಿನಲ್ಲಿ ಭಟ್ಕಳದ ಕಡೆಗೆ ತೆರಳುತ್ತಿರುವ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಬೈಂದೂರು ಸಮೀಪದ ಒತ್ತಿನಣೆಯಲ್ಲಿ ಬಸ್ ತಡೆದು ಆರೋಪಿಗಳನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದರು. ಬಸ್‌ನಿಂದ ಇಳಿದ ಬಳಿಕ ಮೂವರು ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಬೆನ್ನಟ್ಟಿದರು.
ಈ ವೇಳೆ ರಾಜು, ಕಾಪು ಪಿಎಸ್‌ಐ ತೇಜಸ್ವಿ ಅವರನ್ನು ತಳ್ಳಿ ಪಿಸ್ತೂಲ್‌ನಿಂದ ಗುಂಡು ಹಾರಿಸಲು ಮುಂದಾಗಿದ್ದಾನೆ. ಆತ್ಮರಕ್ಷಣೆಗಾಗಿ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ರಾಜುವಿನ ಕಾಲಿಗೆ ಗುಂಡು ತಗುಲಿದ್ದು, ಆತನನ್ನು ಪಿಸ್ತೂಲ್ ಸಮೇತ ಬಂಧಿಸಲಾಯಿತು.
ಇನ್ನುಳಿದ ಆರೋಪಿಗಳಾದ ಅಜಯ್ ರಸ್ತೋಗಿ ಅಲಿಯಾಸ್ ಅನ್ನೋಲ್‌ನನ್ನು ಕುಮಟಾ ಹಾಗೂ ಜಿಯಾಹುಲ್ ವಜೂಲ್ ಶೇಖ್ ಅಲಿಯಾಸ್ ದೀಪಕ್‌ನನ್ನು ಭಟ್ಕಳದಲ್ಲಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಬಂಧಿಸಲಾಯಿತು.
ಗಾಯಗೊಂಡ ರಾಜು ಹಾಗೂ ಪಿಎಸ್‌ಐ ತೇಜಸ್ವಿ ಅವರನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹತ್ಯೆಗೆ ಬಳಸಲಾಗಿದೆ ಎನ್ನಲಾದ ಮೋಟಾರ್‌ಸೈಕಲ್‌ನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದು, ಅದನ್ನು ಎರ್ಮಾಳ್‌ನಲ್ಲಿ ಬಿಟ್ಟು ಹೋಗಲಾಗಿತ್ತು. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

