ಕರಾವಳಿ ವಾಯ್ಸ್ ನ್ಯೂಸ್ 

ಮುಂಡಗೋಡ: ರೌಡಿ ಆಸಾಮಿ ಜಮೀರ್ ಅಹ್ಮದ್ ದರ್ಗಾವಾಲೆ ಕೊಲೆ ಪ್ರಕರಣದ ಆರೋಪಿಗಳಿಗೆ ಇದೀಗ KCOCA ಬಿಸಿ ತಟ್ಟಿದೆ. ಸಂಘಟಿತವಾಗಿ ಅಪರಾಧ ಕೃತ್ಯಗಳಲ್ಲಿ ತೊಡಗಿರುವ ಆರೋಪದ ಮೇಲೆ 11 ಮಂದಿಯ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯಿದೆ (KCOCA) ಅಡಿ ತನಿಖೆ ಮುಂದುವರಿಸಲಾಗಿದೆ.

ತಾಲೂಕಿನ ನೂರಾನಿಗಲ್ಲಿಯಲ್ಲಿ ಜಮೀರ್ ಅಹ್ಮದ್ ನಜೀರ್ ಅಹ್ಮದ್ ದರ್ಗಾವಾಲೆ ಅವರನ್ನು ಖಾರದ ಪುಡಿ ಎರಚಿ, ಹರಿತವಾದ ಆಯುಧಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಗುನ್ನಾ ನಂ.90/2026ರಂತೆ ಬಿಎನ್‌ಎಸ್ ಕಲಂ 103(1) ಸಹಿತ 3(5) ಅಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆರೋಪಿಗಳ ಪತ್ತೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ತನಿಖೆ ತೀವ್ರಗೊಳಿಸಲಾಗಿತ್ತು. ಖಚಿತ ಮಾಹಿತಿ ಹಾಗೂ ತಾಂತ್ರಿಕ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿ ಮಂಜುನಾಥ ನಾಗೇಂದ್ರ ಕಾಜಗಾರ ಸೇರಿದಂತೆ ಒಟ್ಟು 11 ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರಿಂದ ಮೂರು ಪಿಸ್ತೂಲ್‌ಗಳು, ಕೃತ್ಯಕ್ಕೆ ಬಳಸಿದ ವಾಹನಗಳು ಹಾಗೂ ಇತರ ಪ್ರಮುಖ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ಹಿನ್ನೆಲೆ ಹಾಗೂ ಕ್ರಿಮಿನಲ್ ದಾಖಲೆಗಳನ್ನು ಪರಿಶೀಲಿಸಿದಾಗ ರಾಜ್ಯದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕೊಲೆ, ಕೊಲೆ ಯತ್ನ, ಡಕಾಯಿತಿ, ಸುಲಿಗೆ ಹಾಗೂ ರೌಡಿಸಂ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆ ವೇಳೆ ಪ್ರಮುಖ ಆರೋಪಿ ಮಂಜುನಾಥ ಕಾಜಗಾರನು ಅಪರಾಧಿಕ ಹಿನ್ನೆಲೆಯುಳ್ಳ ವ್ಯಕ್ತಿಗಳನ್ನು ಒಳಗೊಂಡ ಸಂಘಟಿತ ಗುಂಪನ್ನು ರಚಿಸಿಕೊಂಡು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ KCOCA ಕಾಯ್ದೆಯ ಕಲಂ 3 ಅಡಿ ತನಿಖೆ ಮುಂದುವರಿಸಲು ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರಿಂದ ಅನುಮೋದನೆ ಪಡೆಯಲಾಗಿದೆ.

ಬಳಿಕ 1ರಿಂದ 11ನೇ ಆರೋಪಿಗಳನ್ನು ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ KCOCA ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯದ ಆದೇಶದಂತೆ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ಪ್ರಕರಣದ ತನಿಖೆಯನ್ನು ಶಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ಮುಂದುವರಿಸಲಾಗಿದೆ.

ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು ಸಂಘಟಿತರಾಗಿ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವ ಯಾವುದೇ ಪ್ರಯತ್ನವನ್ನು ಪೊಲೀಸ್ ಇಲಾಖೆ ಸಹಿಸುವುದಿಲ್ಲ. ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಸುರಕ್ಷತೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.

 

 

Please Share: