ಕರಾವಳಿ ವಾಯ್ಸ್ ನ್ಯೂಸ್ 

ಹಳಿಯಾಳ: ಕಲಘಟಗಿಯಿಂದ ಹಳಿಯಾಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಅಪಘಾತಕ್ಕೊಳಗಾದ ಘಟನೆ ಹಳಿಯಾಳ–ಕಲಘಟಗಿ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ. ಬಾನಸಗೇರಿ ಮುರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಈ ದುರ್ಘಟನೆ ನಡೆದಿದೆ.

ಓವರ್‌ಟೇಕ್ ಮಾಡಲು ಪ್ರಯತ್ನಿಸಿದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರಲ್ಲಿ 20ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಪಘಾತದ ವೇಳೆ ಬಸ್‌ನಲ್ಲಿ ಸುಮಾರು 40ಕ್ಕೂ ಅಧಿಕ ಪ್ರಯಾಣಿಕರು ಇದ್ದು, ಗಾಯಗೊಂಡವರಲ್ಲಿ 8 ವಿದ್ಯಾರ್ಥಿನಿಯರು, 2 ಮಹಿಳೆಯರು, 2 ಶಾಲಾ ಮಕ್ಕಳು ಹಾಗೂ ಬಸ್ ಕಂಡಕ್ಟರ್ ಸೇರಿದ್ದಾರೆ. ಓವರ್‌ಟೇಕ್ ಮಾಡುವ ಸಂದರ್ಭದಲ್ಲೇ ಎದುರುಮುಖದಿಂದ ಕಾರೊಂದು ಬಂದಿದ್ದು, ಅಪಘಾತ ತಪ್ಪಿಸಲು ಹೋಗಿ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ ಎನ್ನಲಾಗಿದೆ.

ಅಪಘಾತದ ಬಳಿಕ ಗಾಯಾಳುಗಳನ್ನು ತಕ್ಷಣವೇ ಹಳಿಯಾಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಪರಿಣಾಮ ಕೆಲಕಾಲ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಜಾಮ್ ಉಂಟಾಯಿತು.

ಮಾಹಿತಿ ಪಡೆದ ಹಳಿಯಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೊಳಗಾದ ಬಸ್ ಹಳಿಯಾಳ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಎಂದು ತಿಳಿದು ಬಂದಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

 

Please Share: