ಕರಾವಳಿ ವಾಯ್ಸ್ ನ್ಯೂಸ್ 

ಹೊನ್ನಾವರ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಅಪ್ಸರಕೊಂಡ ಬೀಚ್‌ನಲ್ಲಿ ಶನಿವಾರ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಸಿಡಿಲು ಆಘಾತದ ಘಟನೆಗಳಲ್ಲಿ ಓರ್ವ ಮೀನುಗಾರ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.

Banner Ad

ಮೃತಪಟ್ಟವರನ್ನು ಅಪ್ಸರಕೊಂಡದ ವಿನಾಯಕ ಖಾರ್ವಿ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಮತ್ತು ಗಾಳಿ ಬೀಸುತ್ತಿದ್ದ ಸಂದರ್ಭದಲ್ಲಿ ವಿನಾಯಕ ಖಾರ್ವಿ ಅವರು ಸಮುದ್ರದಲ್ಲಿ ಪಾತಿ ದೋಣಿಯ ಮೂಲಕ ಮೀನುಗಾರಿಕೆಗೆ ತೆರಳುತ್ತಿದ್ದಾಗ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಇನ್ನೊಂದು ಘಟನೆಯಲ್ಲಿ, ಅಪ್ಸರಕೊಂಡ ಬೀಚ್‌ನ ಗುಡ್ಡದ ಬಳಿ ಸಿಡಿಲು ಬಡಿದು ಹಲವರು ಗಾಯಗೊಂಡಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿದ್ದ ಪ್ರವಾಸಿಗರು ಮತ್ತು ಛಾಯಾಗ್ರಾಹಕರು ಸಿಡಿಲಿನ ಆಘಾತಕ್ಕೆ ಒಳಗಾಗಿದ್ದು, ಗಾಯಾಳುಗಳನ್ನು ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಬಂಧ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

 

Please Share: