ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ತಾಲೂಕಿನ ಹಳಗಾ ಧೋಲ್ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಗಿ ಪಡೆಯದೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಳಗಾ ಧೋಲ್ ಗ್ರಾಮದ ನಿವಾಸಿ ಸಂದೀಪ ಎಂಬಾತ ಭಾನುವಾರ ಸಂಜೆ ಸುಮಾರು 6.30ರ ವೇಳೆಗೆ ತನ್ನ ಸ್ವಂತ ಲಾಭಕ್ಕಾಗಿ ಸಂಬಂಧಪಟ್ಟ ಪ್ರಾಧಿಕಾರದಿಂದ ಯಾವುದೇ ಲೈಸೆನ್ಸ್ ಅಥವಾ ಪರವಾನಗಿ ಪಡೆಯದೆ ಸಾರ್ವಜನಿಕರಿಗೆ ಮದ್ಯ ಸೇವಿಸಲು ಅವಕಾಶ ಮಾಡಿಕೊಡುತ್ತಿದ್ದ ಎನ್ನಲಾಗಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ಪಿಎಸ್‌ಐ ಪರಶುರಾಮ ಮಿರ್ಜಗಿ ಅವರು ಪೊಲೀಸ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಆರೋಪಿತ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ.

ಈ ಸಂಬಂಧ ಪಿಎಸ್‌ಐ ಪರಶುರಾಮ ಮಿರ್ಜಗಿ ಅವರು ನೀಡಿದ ದೂರಿನ ಆಧಾರದ ಮೇಲೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಹಳಗಾದಲ್ಲಿ ಇಂತಹ ದೂರುಗಳು ಹೆಚ್ಚಳ:

ಹಳಗಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆಗೆ ಅವಕಾಶ ನೀಡುತ್ತಿರುವ ಕುರಿತು ಈ ಹಿಂದೆ ಕೂಡ ಸಾಕಷ್ಟು ದೂರುಗಳು ಕೇಳಿಬಂದಿವೆ ಎನ್ನಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಅಥವಾ ಸೇವನೆಗೆ ಅವಕಾಶ ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ, ಸ್ಥಳೀಯ ಸಾಮಾಜಿಕ ಕಾರ್ಯಕರ್ತರೊಬ್ಬರು ಹಳಗಾ ಭಾಗದಲ್ಲಿ ನಡೆಯುತ್ತಿದೆ ಎನ್ನಲಾಗಿರುವ ಅಕ್ರಮ ಮದ್ಯ ಮಾರಾಟದ ವಿರುದ್ಧ ಧ್ವನಿ ಎತ್ತುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಗಂಭೀರವಾಗಿ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂಬ ಒತ್ತಾಯವೂ ಸ್ಥಳೀಯರಿಂದ ಕೇಳಿಬರುತ್ತಿದೆ.

 

 

 

Please Share: