ಕರಾವಳಿ ವಾಯ್ಸ್ ನ್ಯೂಸ್ 

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕೊನೆಯ ಕ್ಷಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಸಚಿವ ಸ್ಥಾನ ದೊರೆಯುವ ನಿರೀಕ್ಷೆಯಲ್ಲಿದ್ದ ಭಟ್ಕಳ ಶಾಸಕ ಮಂಕಾಳು ವೈದ್ಯ ಅವರಿಗೆ ಅವಕಾಶ ಕೈತಪ್ಪಿದೆ. ಅಂತಿಮವಾಗಿ ಹಿರಿಯ ಕಾಂಗ್ರೆಸ್ ನಾಯಕ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.

Banner Ad

ಸೋಮವಾರ ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಆರಂಭಿಕ ಹಂತದಲ್ಲಿ ಮಂಕಾಳು ವೈದ್ಯ ಅವರ ಹೆಸರೂ ಪ್ರಬಲವಾಗಿ ಕೇಳಿಬಂದಿತ್ತು. ಮೀನುಗಾರ ಸಮುದಾಯದ ಪ್ರಾತಿನಿಧ್ಯ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಸಚಿವ ಸ್ಥಾನ ದೊರಕಬೇಕೆಂಬ ಬೇಡಿಕೆ ಹಿನ್ನೆಲೆಯಲ್ಲಿ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಅವರ ಬೆಂಬಲಿಗರಲ್ಲಿ ಮೂಡಿತ್ತು. ಆದರೆ ಅಂತಿಮ ಕ್ಷಣದಲ್ಲಿ ಹೈಕಮಾಂಡ್ ಪಟ್ಟಿಯಲ್ಲಿ ಬದಲಾವಣೆ ಮಾಡಿ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ನಾಲ್ವರು ಶಾಸಕರಿದ್ದು, ಹಿರಿಯ ಶಾಸಕ ಆರ್.ವಿ. ದೇಶಪಾಂಡೆ, ಭಟ್ಕಳ ಶಾಸಕ ಮಂಕಾಳು ವೈದ್ಯ ಹಾಗೂ ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಸೇರಿದಂತೆ ಹಲವು ನಾಯಕರು ಸಚಿವ ಸ್ಥಾನಕ್ಕಾಗಿ ಪ್ರಯತ್ನ ನಡೆಸಿದ್ದರು. ಅಂತಿಮ ಹಂತದಲ್ಲಿ ಆರ್.ವಿ. ದೇಶಪಾಂಡೆ ಹಾಗೂ ಮಂಕಾಳು ವೈದ್ಯ ಅವರ ಹೆಸರುಗಳು ಹೆಚ್ಚು ಚರ್ಚೆಯಲ್ಲಿದ್ದವು.

ಆದರೆ ಅಂತಿಮ ಪಟ್ಟಿಯಲ್ಲಿ ಜಿಲ್ಲೆಯ ಯಾವುದೇ ಶಾಸಕರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಈ ಹಂತದಲ್ಲೂ ಸಚಿವ ಪ್ರಾತಿನಿಧ್ಯ ದೊರೆಯಲಿಲ್ಲ.

ಈ ಬೆಳವಣಿಗೆಯಿಂದ ಮಂಕಾಳು ವೈದ್ಯ ಅವರ ಬೆಂಬಲಿಗರಲ್ಲಿ ನಿರಾಸೆ ವ್ಯಕ್ತವಾಗಿದ್ದು, ಜಿಲ್ಲೆಗೆ ಮತ್ತೆ ಸಚಿವ ಸ್ಥಾನ ಕೈತಪ್ಪಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಹೈಕಮಾಂಡ್‌ನ ಈ ನಿರ್ಧಾರ ಉತ್ತರ ಕನ್ನಡ ಜಿಲ್ಲೆಯ ರಾಜಕೀಯ ಲೆಕ್ಕಾಚಾರಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

 

Please Share: