ಮಾದರಿ ಕೇಂದ್ರಗಳ ನಿರ್ಮಾಣಕ್ಕೆ ಜಿಲ್ಲೆಯಲ್ಲಿ ಗುರಿ : ಡಾ. ದಿಲೀಷ್ ಶಶಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್, ಶಾಲೆ, ಅಂಗನವಾಡಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಾದರಿ ಕೇಂದ್ರಗಳಾಗಿ ರೂಪಿಸುವ ಗುರಿ ಜಿಲ್ಲಾ ಪಂಚಾಯತ್ ಹೊಂದಿದೆ ಎಂದು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ದಿಲೀಷ್ ಶಶಿ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು, ಲಭ್ಯವಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲಾಗುವುದು” ಎಂದು ಹೇಳಿದರು.

ಸೌಕರ್ಯಗಳ ಕೊರತೆ ಅಥವಾ ಸಿಬ್ಬಂದಿಯ ಅಭಾವವನ್ನು ಕಾರಣವನ್ನಾಗಿಸದೆ, ಜನಸ್ನೇಹಿ ಆಡಳಿತ ನೀಡುವುದು ಎಲ್ಲರ ಜವಾಬ್ದಾರಿ ಎಂದು ಅವರು ಸೂಚಿಸಿದರು. ಅಗತ್ಯ ದಾಖಲೆಗಳ ಕುರಿತಂತೆ ಚೆಕ್ ಲಿಸ್ಟ್ ಸಿದ್ಧಪಡಿಸಿ, ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಹಿಂದಿನ ಅಧಿಕಾರಿಗಳು ರೂಪಿಸಿದ ಯೋಜನೆಗಳನ್ನು ಮುಂದುವರೆಸುವ ಜೊತೆಗೆ, ಜಲ ಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್, ನರೇಗಾ ಸೇರಿದಂತೆ ಪ್ರಮುಖ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಬಗ್ಗೆ ಜಿಲ್ಲಾಡಳಿತ ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಲ್ಲಾಬಕ್ಷ್, ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೆಸ್ತಾ, ಲೆಕ್ಕಾಧಿಕಾರಿ ಆನಂದಸಾ ಹಬೀಬ್, ಯೋಜನಾ ನಿರ್ದೇಶಕ ಕರೀಂ ಅಸದಿ ಮತ್ತಿತರರು ಉಪಸ್ಥಿತರಿದ್ದರು.

 

Please Share: