ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಕಾರವಾರ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದು, ಎರಡು ದಿನಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ (ಸ್ಪೆಷಲ್ ಡ್ರೈವ್) 150ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿ, ₹50 ಸಾವಿರಕ್ಕೂ ಅಧಿಕ ದಂಡ ವಸೂಲಿ ಮಾಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಅವರ ನಿರ್ದೇಶನದಲ್ಲಿ, ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀಕಾಂತ ರಾಥೋಡ್ ನೇತೃತ್ವದಲ್ಲಿ ನಗರ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆಯಿತು. ರವಿವಾರ 75 ಪ್ರಕರಣಗಳು ದಾಖಲಾಗಿದ್ದರೆ, ಸೋಮವಾರ 71 ಪ್ರಕರಣಗಳಿಗೆ ದಂಡ ವಿಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಷ್ಟೇ ಅಲ್ಲದೆ ನಗರ ವ್ಯಾಪ್ತಿಯಲ್ಲಿಯೂ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವುದು ಪೊಲೀಸ್ ಅಂಕಿಅಂಶಗಳಿಂದ ತಿಳಿದುಬಂದಿದ್ದು, ವಿಶೇಷವಾಗಿ ದ್ವಿಚಕ್ರ ವಾಹನ ಸವಾರರ ಅಪಘಾತ ಪ್ರಮಾಣ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಹೆಲ್ಮೆಟ್ ಧರಿಸದೆ ಚಾಲನೆ, ಚಾಲನಾ ಪರವಾನಗಿ ಇಲ್ಲದೇ ವಾಹನ ಓಡಿಸುವುದು, ಅತೀ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆ, ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಹಾಗೂ ಸಂಚಾರಕ್ಕೆ ಅಡ್ಡಿಯಾಗುವ ರೀತಿಯ ಕೃತ್ಯಗಳನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಕೇಸ್ ದಾಖಲಿಸಿದ್ದಾರೆ.
ಜಾತ್ರೆ, ಉತ್ಸವ ಹಾಗೂ ಬಂದೋಬಸ್ತ್ ಕರ್ತವ್ಯಗಳ ಹಿನ್ನಲೆಯಲ್ಲಿ ಈ ರೀತಿಯ ಕಾರ್ಯಾಚರಣೆಗಳನ್ನು ನಿಯಮಿತವಾಗಿ ನಡೆಸಲು ಸಾಧ್ಯವಾಗಿರಲಿಲ್ಲ. ಆದರೆ ಇನ್ನುಮುಂದೆ ನಗರ ಮಾತ್ರವಲ್ಲದೆ ರಾಷ್ಟ್ರೀಯ ಹೆದ್ದಾರಿಗಳಲ್ಲಿಯೂ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ನಿರಂತರವಾಗಿ ಇಂತಹ ವಿಶೇಷ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ ದಿನಗಳಲ್ಲಿಯೂ ಪೊಲೀಸ್ ಸಿಬ್ಬಂದಿಗಳು ರಸ್ತೆಗಿಳಿದು ವಾಹನಗಳ ತಪಾಸಣೆ ನಡೆಸಲಿದ್ದು, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
