ಕರಾವಳಿ ವಾಯ್ಸ್ ನ್ಯೂಸ್
ಮುಂಡಗೋಡ,ಜೂ. 10: ಕೊಲೆ, ಕೊಲೆ ಯತ್ನ, ಮೀಟರ್ ಬಡ್ಡಿ ಹಾಗೂ ಇತರ ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ತಾಲೂಕಿನ ಇಬ್ಬರು ರೌಡಿ ಆಸಾಮಿಗಳ ವಿರುದ್ಧ ಜಿಲ್ಲಾಡಳಿತವು ಗುಂಡಾ ಕಾಯ್ದೆಯಡಿ ಕ್ರಮ ಕೈಗೊಂಡಿದ್ದು, ಅವರನ್ನು ಬಂಧಿಸಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ.
ಮುಂಡಗೋಡ ಪೊಲೀಸ್ ಠಾಣೆ ವ್ಯಾಪ್ತಿಯ ಗಾಂಧಿನಗರ ನಿವಾಸಿ ಸಂಜು ತಂದೆ ಅರ್ಜುನ್ ನವಲೆ (24) ಹಾಗೂ ಗುಂಜಾವತಿ ನಿವಾಸಿ ಶಬ್ಬೀರ್ ತಂದೆ ಸತ್ತಾರಸಾಬ ಮಸ್ತಮದಾನಿ (34) ವಿರುದ್ಧ ಹಲವು ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಇಬ್ಬರ ಮೇಲೂ ಈಗಾಗಲೇ ರೌಡಿ ಹಾಳೆ ತೆರೆಯಲಾಗಿದ್ದು, ಅವರ ಚಟುವಟಿಕೆಗಳ ಮೇಲೆ ಪೊಲೀಸ್ ಇಲಾಖೆ ನಿಗಾ ವಹಿಸಿತ್ತು.
ಸಂಜು ನವಲೆ ವಿರುದ್ಧ ದರೋಡೆ, ಎರಡು ಕೊಲೆ, ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಹಾಗೂ ಕೊಲೆ ಯತ್ನ ಸೇರಿದಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ. 2021ರಿಂದ ರೌಡಿ ಹಾಳೆ ತೆರೆಯಲಾಗಿದ್ದರೂ ಆತ ಅಪರಾಧ ಚಟುವಟಿಕೆಗಳನ್ನು ಮುಂದುವರಿಸಿದ್ದಾನೆ ಎಂದು ಪೊಲೀಸ್ ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ.
ಇನ್ನು ಶಬ್ಬೀರ್ ಮಸ್ತಮದಾನಿ ವಿರುದ್ಧ ಹಲ್ಲೆ, ಕೊಲೆ ಯತ್ನ, ಕೊಲೆ, ದೊಂಬಿ ಹಾಗೂ ಬಲವಂತದ ಹಣ ವಸೂಲಿ ಸೇರಿದಂತೆ ಒಟ್ಟು ಎಂಟು ಪ್ರಕರಣಗಳು ದಾಖಲಾಗಿವೆ. 2019ರಿಂದ ಈತನ ಮೇಲೆ ರೌಡಿ ಹಾಳೆ ತೆರೆಯಲಾಗಿದ್ದು, ನಿರಂತರವಾಗಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾನೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇಬ್ಬರ ವಿರುದ್ಧ ಗುಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಮುಂಡಗೋಡ ಪೊಲೀಸ್ ಠಾಣೆಯ ಅಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಕರ್ನಾಟಕ ಅಪಾಯಕಾರಿ ಚಟುವಟಿಕೆಗಳ ಪ್ರತಿಬಂಧಕ ಅಧಿನಿಯಮದಡಿ ಇಬ್ಬರನ್ನು ಬಂಧಿಸಿ ಕಾರಾಗೃಹಕ್ಕೆ ಕಳುಹಿಸುವಂತೆ ಆದೇಶ ಹೊರಡಿಸಿದ್ದಾರೆ.
ಅದರಂತೆ ಜೂನ್ 9ರಂದು ಇಬ್ಬರನ್ನೂ ಗುಂಡಾ ಕಾಯ್ದೆಯಡಿ ಬಂಧಿಸಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ.
ಜಿಲ್ಲಾ ಪೊಲೀಸ್ ಮೂಲಗಳ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಐದು ತಿಂಗಳ ಅವಧಿಯಲ್ಲಿ ಕೊಲೆ, ಮೀಟರ್ ಬಡ್ಡಿ ಹಾಗೂ ಇತರೆ ಗಂಭೀರ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 12 ಜನರ ವಿರುದ್ಧ ಗಡಿಪಾರು ಹಾಗೂ ಪ್ರತಿಬಂಧಕ ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ಆರು ಮಂದಿಯ ವಿರುದ್ಧ ಉಪವಿಭಾಗಾಧಿಕಾರಿಗಳು ಹಾಗೂ ಆರು ಮಂದಿಯ ವಿರುದ್ಧ ಜಿಲ್ಲಾ ಮಟ್ಟದಲ್ಲಿ ಕ್ರಮ ಜರುಗಿಸಲಾಗಿದೆ.
