ಕರಾವಳಿ ವಾಯ್ಸ್ ನ್ಯೂಸ್
ಕುಮಟಾ, ಏ.2: ತಾಲೂಕಿನ ಹೀರೆಗುತ್ತಿ ಗ್ರಾಮದಲ್ಲಿರುವ ಶ್ರೀ ಬ್ರಹ್ಮ ಜಟಕ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಬುಧವಾರ ರಾತ್ರಿ 11 ಗಂಟೆಯಿಂದ ಗುರುವಾರ ಬೆಳಿಗ್ಗೆ 7.30ರ ನಡುವಿನ ಅವಧಿಯಲ್ಲಿ ದುಷ್ಕರ್ಮಿಗಳು ದೇವಸ್ಥಾನದ ಮುಂಭಾಗದಲ್ಲಿದ್ದ ಕಾಣಿಕೆ ಹುಂಡಿಯನ್ನು ಗುರಿಯಾಗಿಸಿಕೊಂಡಿದ್ದಾರೆ. ಹುಂಡಿಯ ಬೀಗವನ್ನು ಯಾವುದೋ ಸಾಧನದ ಸಹಾಯದಿಂದ ಮುರಿದು, ಮುಚ್ಚಳ ತೆರೆದು ಅದರಲ್ಲಿದ್ದ ಸುಮಾರು ₹10 ಸಾವಿರ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.
ಈ ಕುರಿತು ಹೀರೆಗುತ್ತಿ ನಿವಾಸಿ ರೈತ ಚಂದ್ರಹಾಸ ಹೊಸಬು ನಾಯಕ (53) ಅವರು ಗೋಕರ್ಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ದೇವಸ್ಥಾನದಲ್ಲಿ ಭದ್ರತೆ ಹೆಚ್ಚಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

