ಕರಾವಳಿ ವಾಯ್ಸ್ ನ್ಯೂಸ್ 

ರಾಮನಗರ, ಜೂ.10: ಕಾರವಾರ–ರಾಮನಗರ ಮುಖ್ಯ ರಸ್ತೆಯ ಜಗಲಬೆಟ್ ಸಮೀಪದ ಕೃಷ್ಣ ದೇವಸ್ಥಾನದ ತಿರುವಿನಲ್ಲಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ನಿಸ್ಸಾನ್ ಕಾರು, ಬೊಲೆರೊ ವಾಹನ ಹಾಗೂ ಬೈಕ್‌ಗೆ ಸರಣಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ವಾಹನಗಳು ಜಖಂಗೊಂಡಿದ್ದು, ಕೆಲ ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣ ರಾಮನಗರ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೆಲವರನ್ನು ಹುಬ್ಬಳ್ಳಿಯ ಕೆಎಂಸಿ ಆಸ್ಪತ್ರೆ ಹಾಗೂ ಬೆಳಗಾವಿಯ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟ ಟಿಪ್ಪರ್ ಚಾಲಕನನ್ನು ಕುಮಟಾ ಮೂಲದ ಬಾಬು ಎಂದು ಗುರುತಿಸಲಾಗಿದೆ. ಘಟನೆಯಿಂದ ಕಾರವಾರ–ರಾಮನಗರ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಎರಡೂ ಬದಿಗಳಲ್ಲಿ ವಾಹನಗಳ ಸಾಲು ಕಂಡುಬಂದಿತು.

ಮಾಹಿತಿ ತಿಳಿಯುತ್ತಿದ್ದಂತೆ ರಾಮನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಸಂಚಾರ ಸುಗಮಗೊಳಿಸಿದರು. ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

 

Please Share: