ಕರಾವಳಿ ವಾಯ್ಸ್ ನ್ಯೂಸ್
ಮಂಗಳೂರು: ಪ್ರೀತಿಗೆ ವಿರೋಧ ವ್ಯಕ್ತಪಡಿಸಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಕುಟುಂಬದ ಸದಸ್ಯರೇ ಖಾಸಗಿ ಮೆಡಿಕಲ್ ಕಾಲೇಜಿನ ಕ್ಯಾಂಪಸ್ನಿಂದ ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಆರೋಪ ಮಂಗಳೂರಿನಲ್ಲಿ ಕೇಳಿಬಂದಿದೆ. ವಿದ್ಯಾರ್ಥಿನಿಯನ್ನು ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ವಿದ್ಯಾರ್ಥಿನಿ ಹಿಂದೂ ಯುವಕನೊಂದಿಗೆ ಪ್ರೀತಿಯ ಸಂಬಂಧ ಹೊಂದಿರುವುದಕ್ಕೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ ಕಾಲೇಜು ಆವರಣದಿಂದಲೇ ಆಕೆಯನ್ನು ಬಲವಂತವಾಗಿ ವಾಹನದಲ್ಲಿ ಕರೆದೊಯ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ವಿಡಿಯೋ ವೈರಲ್ ಬೆನ್ನಲ್ಲೇ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಯುವತಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬದ ಸದಸ್ಯರು ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಆರೋಪವಿದೆ. ಇದೂ ಕಾನೂನಿನ ಪ್ರಕಾರ ಅಪರಾಧವಾಗುತ್ತದೆ ಎಂದು ತಿಳಿಸಿದ್ದಾರೆ.
ಯುವತಿ ಪ್ರಾಪ್ತವಯಸ್ಕಳಾಗಿದ್ದು, ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ. ಘಟನೆ ನಡೆದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರೆ, ವಾಹನ ಹೆಚ್ಚು ದೂರ ಸಾಗುವ ಮುನ್ನವೇ ತಡೆದು ಯುವತಿಯನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿತ್ತು ಎಂದು ಹೇಳಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಸಿ, ಯುವತಿಯನ್ನು ಪತ್ತೆಹಚ್ಚುವಂತೆ ಸೂಚನೆ ನೀಡಲಾಗಿದೆ. ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ ಉಲ್ಲೇಖಿಸಿರುವಂತೆ, ಯುವತಿ ಹಿಂದೂ ಯುವಕನೊಂದಿಗೆ ಪ್ರೀತಿಯ ಸಂಬಂಧ ಹೊಂದಿರುವುದು ಕಂಡುಬರುತ್ತದೆ ಎಂದು ಕಮಿಷನರ್ ತಿಳಿಸಿದ್ದಾರೆ.


