ಕರಾವಳಿ ವಾಯ್ಸ್ ನ್ಯೂಸ್
ಬೆಂಗಳೂರು, ಸೆ.10: ರಾಜ್ಯ ಸರ್ಕಾರದ ಕಾರ್ಯಕ್ರಮಗಳು ಹಾಗೂ ಸಮಾರಂಭಗಳಲ್ಲಿ ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಮಾರ್ಗಸೂಚಿ ಹಾಗೂ ಸಚಿವ ಸಂಪುಟದ ತೀರ್ಮಾನದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ವಾದನ ಅಥವಾ ಸಾಮೂಹಿಕ ಗಾಯನಕ್ಕೆ ಏಕರೂಪತೆ, ಗೌರವ ಹಾಗೂ ಸೂಕ್ತ ಶಿಷ್ಟಾಚಾರ ಕಾಯ್ದುಕೊಳ್ಳುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ರಾಜ್ಯಪಾಲರು ಉಪಸ್ಥಿತರಿರುವ ಕಾರ್ಯಕ್ರಮಗಳನ್ನು ಹೊರತುಪಡಿಸಿ, ರಾಜ್ಯ ಸರ್ಕಾರದ ಇತರ ಕಾರ್ಯಕ್ರಮಗಳು ಮತ್ತು ಸಮಾರಂಭಗಳಲ್ಲಿ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂದು ಸರ್ಕಾರ ಆದೇಶಿಸಿದೆ.
ಸರ್ಕಾರದ ಆದೇಶ ಸಂಖ್ಯೆ ಸಿಆಸುಇ/03/HCR/2026 (ಭಾಗ-2) ಅನ್ನು ಸೆ.8, 2026ರಂದು ಬೆಂಗಳೂರು ನಗರದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ರಾಜಕೀಯ) ಅಧೀನ ಕಾರ್ಯದರ್ಶಿ ಸಂದೀಪ್ ಬಿ.ಕೆ. ಅವರು ರಾಜ್ಯಪಾಲರ ಆದೇಶಾನುಸಾರ ಹೊರಡಿಸಿದ್ದಾರೆ.


