ಕರಾವಳಿ ವಾಯ್ಸ್ ನ್ಯೂಸ್ 

ಧಾರವಾಡ, ಜು. 2: ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಿಟಕಿ ಹೊರಗೆ ತಲೆ ಹಾಕಿದ ವಿದ್ಯಾರ್ಥಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ರುಂಡ ತುಂಡಾಗಿ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಬುಧವಾರ ಸಂಜೆ ಕುಂದಗೋಳ ತಾಲೂಕಿನ ಶೆರೇವಾಡ ಗ್ರಾಮದ ಕೊಪ್ಪದ ಕೆರೆ ಸಮೀಪ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಶಿರೂರ ಗ್ರಾಮದ ಫಕ್ಕೀರೇಶ ಚನ್ನಯ್ಯ ಮುತ್ತಳ್ಳಿಮಠ (17) ಎಂದು ಗುರುತಿಸಲಾಗಿದೆ. ಅವರು ಐಟಿಐ ವಿದ್ಯಾರ್ಥಿಯಾಗಿದ್ದು, ಸಂಜೆ ಸುಮಾರು 5 ಗಂಟೆಗೆ ಲಕ್ಷ್ಮೀಶ್ವರದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು.

ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಬಸ್‌ನ ಕೊನೆಯ ಸೀಟಿನಲ್ಲಿ ಕುಳಿತಿದ್ದ ಫಕ್ಕೀರೇಶ ಉಗುಳಲು ಕಿಟಕಿಯ ಹೊರಗೆ ತಲೆ ಹಾಕಿದ್ದಾರೆ. ಇದೇ ವೇಳೆ ಎದುರಿನಿಂದ ಬಂದ ಲಾರಿ ಅವರ ತಲೆಗೆ ಡಿಕ್ಕಿ ಹೊಡೆದ ಪರಿಣಾಮ ರುಂಡ ತುಂಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಬೆಚ್ಚಿಬಿದ್ದಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮಾಹಿತಿ ತಿಳಿಯುತ್ತಿದ್ದಂತೆ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

Please Share: