ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಅಧಿನಿಯಮ-2022 ಅನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಕ್ರೈಸ್ತ ಒಕ್ಕೂಟದ ಕಾರವಾರ ವಲಯದ ವತಿಯಿಂದ ನ.12ರಂದು ಕಾರವಾರದಲ್ಲಿ ಮೌನ ಹಾಗೂ ಶಾಂತಿಯುತ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

Banner Ad

ಈ ಕಾಯ್ದೆಯು ಸಂವಿಧಾನದ 25ನೇ ವಿಧಿಯಡಿ ಪ್ರತಿಯೊಬ್ಬರಿಗೂ ನೀಡಿರುವ ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿಗೆ ಧಕ್ಕೆ ತರುತ್ತಿದೆ. ಕಾಯ್ದೆಯ ದುರ್ಬಳಕೆಯಿಂದ ಕ್ರೈಸ್ತ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿಗಳು ನಡೆಯುತ್ತಿದ್ದು, ಸಮುದಾಯದವರು ಕಿರುಕುಳ ಎದುರಿಸುವಂತಾಗಿದೆ ಎಂದು ಒಕ್ಕೂಟ ಆರೋಪಿಸಿದೆ. ಈ ಕುರಿತು ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ನ್ಯಾಯ ದೊರಕಿಲ್ಲ ಎಂದು ತಿಳಿಸಿದೆ.

ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಮಿತ್ರ ಸಮಾಜ ಮೈದಾನದಿಂದ ಮೆರವಣಿಗೆ ಆರಂಭವಾಗಲಿದ್ದು, ಸುಭಾಷ್ ವೃತ್ತ, ಸವಿತಾ ವೃತ್ತ, ಡಾ. ಕಮಲಾಕರ ರಸ್ತೆ, ಅಂಬೇಡ್ಕರ್ ವೃತ್ತ ಹಾಗೂ ಪತ್ರಿಕಾ ಭವನದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತಲುಪಲಿದೆ. ಅಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಮೆರವಣಿಗೆ ಮುಕ್ತಾಯಗೊಳ್ಳಲಿದೆ.

ಉತ್ತರ ಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದ 3 ಸಾವಿರಕ್ಕೂ ಅಧಿಕ ಕ್ರೈಸ್ತ ಸಮುದಾಯದವರು ಭಾಗವಹಿಸುವ ನಿರೀಕ್ಷೆಯಿದೆ. ಕಾಯ್ದೆ ರದ್ದತಿಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನಾ ಕಾರ್ಯಕ್ರಮದ ಭಾಗವಾಗಿ ಈ ಮೆರವಣಿಗೆ ಆಯೋಜಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಫಾದರ್ ಎಡ್ರಿನ್ ಪಾಲ್ ಡಿಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Please Share: