ಕರಾವಳಿ ವಾಯ್ಸ್ ನ್ಯೂಸ್ 

ಹೊನ್ನಾವರ: ಪಟ್ಟಣದ ಬಸ್ ನಿಲ್ದಾಣದ ಸಮೀಪದಲ್ಲಿರುವ ಯು.ಕೆ. ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಲ್ಲಿ (U.K. Souharda Co-operative Society) ರವಿವಾರ ಮಧ್ಯಾಹ್ನ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ-ಪಾಸ್ತಿ ಹಾನಿಯಾಗಿರುವ ಘಟನೆ ನಡೆದಿದೆ.

ಜೇನು ಸೊಸೈಟಿ ಕಟ್ಟಡದ ಮೇಲಂತಸ್ತಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಸೊಸೈಟಿಯಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡು ಬಳಿಕ ಬೆಂಕಿ ವ್ಯಾಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸೊಸೈಟಿಯೊಳಗಿನ ಸಿ.ಸಿ.ಟಿ.ವಿ ವ್ಯವಸ್ಥೆಯಲ್ಲಿ ಉಂಟಾದ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಕಿ ವೇಗವಾಗಿ ವ್ಯಾಪಿಸಿದ ಪರಿಣಾಮ ಬ್ಯಾಂಕಿನಲ್ಲಿದ್ದ ಕಂಪ್ಯೂಟರ್‌ಗಳು, ದಾಖಲೆಗಳನ್ನು ಸಂಗ್ರಹಿಸುವ ಚೆಂಬರ್, ಕುರ್ಚಿಗಳು ಹಾಗೂ ಇತರೆ ಬೆಲೆಬಾಳುವ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯ ತೀವ್ರತೆಯಿಂದ ಮೇಲಂತಸ್ತಿನ ಒಳಭಾಗ ಬಹುತೇಕ ಸಂಪೂರ್ಣ ಹಾನಿಗೊಳಗಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಸುದ್ದಿ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶ್ರಮಪಟ್ಟು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಇನ್ನಷ್ಟು ವ್ಯಾಪಿಸುವ ಮುನ್ನವೇ ನಿಯಂತ್ರಣಕ್ಕೆ ತಂದು ಕೆಳಂತಸ್ತು ಮತ್ತು ಸುತ್ತಮುತ್ತಲಿನ ಅಂಗಡಿಗಳಿಗೆ ಹಾನಿಯಾಗುವುದನ್ನು ತಪ್ಪಿಸಲಾಗಿದೆ.

ಅವಘಡ ಸಂಭವಿಸಿದ ಸಮಯದಲ್ಲಿ ಸೊಸೈಟಿಯಲ್ಲಿ ಸಿಬ್ಬಂದಿ ಮತ್ತು ಸಾರ್ವಜನಿಕರ ಓಡಾಟ ಕಡಿಮೆಯಿದ್ದ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಪ್ರಕರಣಗಳು ವರದಿಯಾಗಿಲ್ಲವೆಂದು ತಿಳಿದುಬಂದಿದೆ. ಆದರೆ ಆರ್ಥಿಕ ನಷ್ಟ ಮಾತ್ರ ಗಮನಾರ್ಹವಾಗಿದ್ದು, ಲಕ್ಷಾಂತರ ರೂಪಾಯಿ ಹಾನಿಯಾಗಿರುವುದಾಗಿ ಅಂದಾಜಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದು, ನಿಖರ ಕಾರಣ ಹಾಗೂ ಹಾನಿಯ ಪ್ರಮಾಣ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

 

 

Please Share: