ಕರಾವಳಿ ವಾಯ್ಸ್ ನ್ಯೂಸ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ವಿಶೇಷ ಒತ್ತು ನೀಡಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಶುದ್ಧ ಕುಡಿಯುವ ನೀರು, ರಸ್ತೆ ಸಂಪರ್ಕ ಹಾಗೂ ಸ್ವಚ್ಛತೆಗೆ ಹೆಚ್ಚಿನ ಅನುದಾನ ಮೀಸಲಿಟ್ಟು, ರೈತರು ಮತ್ತು ಗ್ರಾಮೀಣ ಜನರ ಜೀವನಮಟ್ಟ ಸುಧಾರಿಸಲು ಸರ್ಕಾರ ಹಲವು ಮಹತ್ವದ ಘೋಷಣೆಗಳನ್ನು ಮಾಡಿದೆ.
ಬಜೆಟ್‌ನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ ಮಾಡುವ ನಿರ್ಧಾರ ಘೋಷಿಸಲಾಗಿದೆ. ಗ್ರಾಮೀಣ ಸ್ವಾಯತ್ತತೆ ಹಾಗೂ ಗಾಂಧೀಜಿ ಆದರ್ಶಗಳಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ಜಲಜೀವನ್ ಮಿಷನ್ ಯೋಜನೆಯಡಿ ₹69,488 ಕೋಟಿ ಮೌಲ್ಯದ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಜೊತೆಗೆ ಕುಡಿಯುವ ನೀರಿನ ಸ್ವಚ್ಛತೆ ಕಾಪಾಡಲು ₹30 ಕೋಟಿ ಅನುದಾನ ಮೀಸಲಿಡಲಾಗಿದೆ.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ರಸ್ತೆ ಅಭಿವೃದ್ಧಿಗೆ ‘ಕಲ್ಯಾಣ ಪಥ್’ ಯೋಜನೆಯಡಿ ವಿಶೇಷ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಹಾಗೆಯೇ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ADB) ನೆರವಿನೊಂದಿಗೆ ಗ್ರಾಮೀಣ ರಸ್ತೆ ಸಂಪರ್ಕ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಗ್ರಾಮಗಳು ಮತ್ತು ಮಾರುಕಟ್ಟೆಗಳ ನಡುವೆ ಸುಗಮ ಸಂಪರ್ಕ ಕಲ್ಪಿಸುವ ಉದ್ದೇಶ ಹೊಂದಿದೆ.
ಇದಲ್ಲದೆ, ಕೊಪ್ಪಳ ಜಿಲ್ಲೆಯ 23 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಯೋಜನೆಗಾಗಿ ₹125 ಕೋಟಿ ವೆಚ್ಚ ಮಾಡುವುದಾಗಿ ಘೋಷಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಬಿಲ್ ಪಾವತಿ ವ್ಯವಸ್ಥೆಯನ್ನು ಸುಗಮಗೊಳಿಸಲು ‘ಅನಂತ’ ಯೋಜನೆಯನ್ನು ಜಾರಿಗೆ ತರಲಾಗುತ್ತದೆ.
ಒಟ್ಟಾರೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ₹26,559 ಕೋಟಿ ಅನುದಾನ ಮೀಸಲಿಡಲಾಗಿದ್ದು, ಇದರ ಮೂಲಕ ಗ್ರಾಮ ಪಂಚಾಯಿತಿಗಳ ಸಬಲೀಕರಣ, ಜಲ ಸಂಪನ್ಮೂಲ ನಿರ್ವಹಣೆ, ರಸ್ತೆ ಸಂಪರ್ಕ ಮತ್ತು ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗಿದೆ.
ಸರ್ಕಾರದ ಈ ಘೋಷಣೆಗಳು ಗ್ರಾಮೀಣ ರೈತರು, ಕುಟುಂಬಗಳು ಹಾಗೂ ಪಂಚಾಯತ್ ಸದಸ್ಯರಲ್ಲಿ ಹೊಸ ಆತ್ಮವಿಶ್ವಾಸ ಮೂಡಿಸಿದ್ದು, ಗ್ರಾಮೀಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಲಾಗಿದೆ.
