ಕರಾವಳಿ ವಾಯ್ಸ್ ನ್ಯೂಸ್ 

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಗುರುವಾರ ಸಾರ್ವಜನಿಕರ ಎದುರೇ ನಡೆದ ತಲವಾರು ದಾಳಿಯಲ್ಲಿ 25 ವರ್ಷದ ಯುವತಿ ಮೃತಪಟ್ಟಿರುವ ಘಟನೆ ಆತಂಕ ಮೂಡಿಸಿದೆ.

ಮೃತ ಯುವತಿಯನ್ನು ಕಕ್ಯಪದವು ಸಮೀಪದ ಕೊಡಂಗೆಯ ನಿವಾಸಿ ಬಾಳಪ್ಪ ಗೌಡ ಅವರ ಪುತ್ರಿ ಲಾವಣ್ಯ (25) ಎಂದು ಗುರುತಿಸಲಾಗಿದೆ. ಅವರು ಕಲ್ಲಡ್ಕದ ಖಾಸಗಿ ಚಿಕಿತ್ಸಾಲಯದಲ್ಲಿ ಶುಶ್ರೂಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಪ್ರಕರಣದ ಆರೋಪಿ ಚೇತನ್ ಎಂಬಾತನಾಗಿದ್ದು, ಆತ ಮೃತ ಯುವತಿಯ ದೂರದ ಸಂಬಂಧಿಯಾಗಿದ್ದಾನೆ. ಯುವತಿಯನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗುರುವಾರ ಕೆಲಸ ಮುಗಿಸಿ ಮನೆಗೆ ತೆರಳಲು ಲಾವಣ್ಯ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಕಕ್ಯಪದವಿಗೆ ತೆರಳುವ ಬಸ್‌ನಲ್ಲಿ ಕುಳಿತಿದ್ದರು. ಇದೇ ವೇಳೆ ಐ10 ಕಾರಿನಲ್ಲಿ ಬಂದಿದ್ದ ಆರೋಪಿ ಬಸ್‌ಗೆ ಹತ್ತಿ ತನ್ನ ಬ್ಯಾಗಿನಲ್ಲಿದ್ದ ತಲವಾರನ್ನು ಹೊರತೆಗೆದಿದ್ದಾನೆ. ಇದನ್ನು ಗಮನಿಸಿದ ಯುವತಿ ಬಸ್‌ನಿಂದ ಇಳಿದು ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದರೂ, ಬೆನ್ನಟ್ಟಿದ ಆರೋಪಿ ಸಾರ್ವಜನಿಕರ ಎದುರೇ ಆಕೆಯ ಕುತ್ತಿಗೆಯ ಹಿಂಭಾಗಕ್ಕೆ ತಲವಾರಿನಿಂದ ಹಲ್ಲೆ ನಡೆಸಿದ್ದಾನೆ.

ಗಂಭೀರವಾಗಿ ಗಾಯಗೊಂಡ ಲಾವಣ್ಯ ಸ್ವಲ್ಪ ದೂರ ಓಡಿದ ಬಳಿಕ ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣ ಅವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಘಟನೆಯ ಬಳಿಕ ಆರೋಪಿ ಕೃತ್ಯಕ್ಕೆ ಬಳಸಿದ ತಲವಾರನ್ನು ಸ್ಥಳದಲ್ಲೇ ಬಿಸಾಡಿ ಕಾರಿನಲ್ಲಿ ಪರಾರಿಯಾಗಿದ್ದಾನೆ. ಆರೋಪಿಯ ಬಂಧನಕ್ಕಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಎಸ್‌ಪಿ ಯಶ್ ಕುಮಾರ್ ಶರ್ಮ, ಬಂಟ್ವಾಳ ನಗರ ಠಾಣೆಯ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ, ಪಿಎಸ್‌ಐ ಸಂದೀಪ್ ಶೆಟ್ಟಿ, ಸಂಚಾರ ಠಾಣೆಯ ಪಿಎಸ್‌ಐ ಆದರ್ಶ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

 

Please Share: