ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಕೈಗಾ ಅಣು ವಿದ್ಯುತ್ ಘಟಕದಿಂದ ಮಲ್ಲಾಪುರ ಟೌನ್‌ಶಿಪ್ ಕಡೆಗೆ ಬರುತ್ತಿದ್ದ ಖಾಸಗಿ ಟೆಂಪೋ ಪಲ್ಟಿಯಾದ ಪರಿಣಾಮ 16 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ 9.45ರ ಸುಮಾರಿಗೆ ನಡೆದಿದೆ.

ಮಾಹಿತಿಯ ಪ್ರಕಾರ, ಕೈಗಾ ಪ್ಲ್ಯಾoಟಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಹೊರಗುತ್ತಿಗೆ ಕಾರ್ಮಿಕರು ರಾತ್ರಿ ಶಿಫ್ಟ್ ಮುಗಿಸಿಕೊಂಡು ಟೆಂಪೋದಲ್ಲಿ ಟೌನ್‌ಶಿಪ್ ಕಡೆಗೆ ಮರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟೆಂಪೋ ರಸ್ತೆ ಬದಿಗೆ ಪಲ್ಟಿಯಾಗಿದೆ.

ಘಟನೆಯಲ್ಲಿ ಪ್ರಯಾಣಿಸುತ್ತಿದ್ದ 16 ಕಾರ್ಮಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯರ ಸಹಕಾರದಿಂದ ಕಾರವಾರ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ ಯಾರಿಗೂ ಗಂಭೀರ ಗಾಯವಾಗಿಲ್ಲವೆಂದು ವೈದ್ಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಮಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.

ಘಟನೆ ಬಳಿಕ ಟೆಂಪೋ ಪಲ್ಟಿಯಾದ ಸ್ಥಳದಿಂದ ವಾಹನವನ್ನು ಕ್ರೇನ್‌ ಸಹಾಯದಿಂದ ತೆರವುಗೊಳಿಸಲಾಗುತ್ತಿದೆ.

ಪೊಲೀಸರು ಚಾಲಕನಿಂದ ವಿಚಾರಣೆ ನಡೆಸಿ, ಅಪಘಾತದ ನಿಖರ ಕಾರಣ ಪತ್ತೆಹಚ್ಚುವ ಪ್ರಯತ್ನ ನಡೆಸುತ್ತಿದ್ದಾರೆ.

 

Please Share: