ಕರಾವಳಿ ವಾಯ್ಸ್ ನ್ಯೂಸ್ 

ಹಳಿಯಾಳ: ಪಟ್ಟಣದ ಬಸ್ ನಿಲ್ದಾಣದ ಎದುರಿನ ಮಧುವನ ಬಾರ್ ಹಾಗೂ ರೆಸ್ಟೋರೆಂಟ್‌ನಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಹಳಿಯಾಳ ಪೊಲೀಸ್‌ರು ಯಶಸ್ವಿಯಾಗಿದ್ದು, ಈ ಪ್ರಕರಣದಲ್ಲಿ ಆರೋಪಿತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಯನ್ನು ನಾಸೀರ್ ಇರ್ಪಾನ್ ಇಸಾಕ್‌ಸಾಬ್ ಮದನಳ್ಳಿ ಎಂದು ಗುರುತಿಸಲಾಗಿದ್ದು, ಆತ ಕಿಚನ್‌ನ ಹಿಂಭಾಗದಿಂದ ಅಂಗಡಿಗೆ ಅಕ್ರಮವಾಗಿ ಪ್ರವೇಶಿಸಿ, ಕ್ಯಾಶ್ ಕೌಂಟರ್‌ನಲ್ಲಿ ಇರಿಸಿದ್ದ 16,500 ರೂ. ನಗದು ಹಣವನ್ನು ಕಳವು ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಹಳಿಯಾಳ ಪೊಲೀಸರು, ವಿಶೇಷ ತನಿಖಾ ತಂಡವನ್ನು ರಚಿಸಿ ಸಿಸಿಟಿವಿ ದೃಶ್ಯಾವಳಿ ಹಾಗೂ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದರು. ಮಂಗಳವಾರ ಅಳ್ಳಾವರ ರೈಲು ನಿಲ್ದಾಣದ ಸಮೀಪ ಆರೋಪಿತನನ್ನು ದಸ್ತಗಿರಿ ಮಾಡಲಾಗಿದ್ದು, ವಿಚಾರಣೆಯ ವೇಳೆ ಆತ ಕಳ್ಳತನ ಮಾಡಿದ ವಿಚಾರವನ್ನು ಒಪ್ಪಿಕೊಂಡಿದ್ದಾನೆ.

ಆರೋಪಿತನಿಂದ 14,300 ರೂ. ನಗದು ಹಣವನ್ನು ಜಪ್ತಿ ಮಾಡಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.

ಪೊಲೀಸ್ ದಾಖಲೆಗಳ ಪ್ರಕಾರ, ಬಂಧಿತ ಆರೋಪಿತನ ಮೇಲೆ ಉತ್ತರ ಕನ್ನಡ ಜಿಲ್ಲೆ ಮಾತ್ರವಲ್ಲದೆ ಕರ್ನಾಟಕ ಮತ್ತು ಗೋವಾ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವಾರು ಕಳ್ಳತನ ಪ್ರಕರಣಗಳು ದಾಖಲಾಗಿವೆ. ಇದರಿಂದಾಗಿ ಆತ ವೃತ್ತಿಪರ ಕಳ್ಳನಾಗಿರುವ ಶಂಕೆ ಮತ್ತಷ್ಟು ಬಲಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಯಶಸ್ವಿ ಬಂಧನ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಎಸ್ಪಿಗಳಾದ ಕೃಷ್ಣಮೂರ್ತಿ ಹಾಗೂ ಜಗದೀಶ ನಾಯ್ಕ, ಡಿವೈಎಸ್ಪಿ ಶಿವಾನಂದ ಮದರಕಂಡಿ, ಸಿಪಿಐ ಜಯಪಾಲ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿದೆ.

ಹಳಿಯಾಳ ಪೊಲೀಸ್ ಠಾಣೆಯ ಪಿಎಸ್‌ಐಗಳಾದ ಬಸವರಾಜ ಮಬನೂರ (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಕೃಷ್ಣಾ ಅರಕೇರಿ (ತನಿಖೆ) ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಅಶೋಕ ಮೋರೆ, ವಿನೋದ್, ಶ್ರೀಶೈಲ್ ಜಿ.ಎಂ., ಲಕ್ಷ್ಮಣ ಪೂಜಾರಿ, ವಿನಾಯಕ ನಾಯ್ಕ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪೊಲೀಸರ ಸಮಯೋಚಿತ ಕ್ರಮ ಮತ್ತು ನಿಖರ ತನಿಖೆಯಿಂದ ಪ್ರಕರಣ ಶೀಘ್ರ ಪತ್ತೆಯಾಗಿದ್ದು, ವ್ಯಾಪಾರಿಗಳಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗಿದೆ. ಇಂತಹ ಕಳ್ಳತನ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಮುಂದುವರಿಯಲಿದೆ ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

 

 

Please Share: