ಕರಾವಳಿ ವಾಯ್ಸ್ ನ್ಯೂಸ್ 

ದಾಂಡೇಲಿ, ಜೂ.13: ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುತ್ತಿದ್ದ ದಾಂಡೇಲಿ ನಗರ ಪೊಲೀಸ್ ಠಾಣೆಯ ರೌಡಿಶೀಟರ್ ಬಾಬು ರಾಮಪ್ಪ ದೊಡ್ಡಮನಿ (41) ಅವರನ್ನು ಉತ್ತರ ಕನ್ನಡ ಜಿಲ್ಲೆಯಿಂದ 6 ತಿಂಗಳ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ದಾಂಡೇಲಿಯ ಬರ್ಚಿ ರಸ್ತೆ ನಿವಾಸಿಯಾಗಿರುವ ಬಾಬು ದೊಡ್ಡಮನಿ ವಿರುದ್ಧ 2012ರಿಂದ 2025ರವರೆಗೆ 2 ಕೊಲೆ ಯತ್ನ, 3 ದೊಂಬಿ, 1 ಜೂಜಾಟ, 1 ಲೈಂಗಿಕ ದೌರ್ಜನ್ಯ, 1 ಹಲ್ಲೆ ಹಾಗೂ 1 ಎಸ್ಸಿ-ಎಸ್ಟಿ ಕಾಯ್ದೆಯಡಿ ಪ್ರಕರಣ ಸೇರಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ರೌಡಿ ಶೀಟ್ ತೆರೆಯಲಾಗಿತ್ತು.

ಹಲವು ಎಚ್ಚರಿಕೆಗಳ ನಡುವೆಯೂ ಅಪರಾಧ ಚಟುವಟಿಕೆಗಳನ್ನು ಮುಂದುವರಿಸಿದ್ದರಿಂದ ದಾಂಡೇಲಿ ನಗರ ಠಾಣೆ ಅಧಿಕಾರಿಗಳು ಗಡಿಪಾರು ಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 55(ಎ) ಮತ್ತು 55(ಬಿ) ಅಡಿಯಲ್ಲಿ ಜೂನ್ 6ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.

ಆದೇಶದಂತೆ ಬಾಬು ದೊಡ್ಡಮನಿಯನ್ನು 6 ತಿಂಗಳ ಕಾಲ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದ್ದು, ಈ ಅವಧಿಯಲ್ಲಿ ಬೀದರ ಜಿಲ್ಲೆಯ ಬೀದರ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವಂತೆ ಸೂಚಿಸಲಾಗಿದೆ. ದಾಂಡೇಲಿ ನಗರ ಠಾಣೆ ಪೊಲೀಸರು ಆತನನ್ನು ಬೀದರ ಸಬ್ ಅರ್ಬನ್ ಪೊಲೀಸ್ ಠಾಣೆ ಅಧಿಕಾರಿಗಳ ಮುಂದೆ ಹಾಜರುಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

 

Please Share: