ಕರಾವಳಿ ವಾಯ್ಸ್ ನ್ಯೂಸ್
ಅಂಕೋಲಾ/ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ–ಕುಮಟಾ ತಾಲೂಕಿನ ಗಡಿಭಾಗದಲ್ಲಿರುವ ಗಂಗಾವಳಿ ಸೇತುವೆಯ ತಳಭಾಗದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಶುಕ್ರವಾರ ಮುಂಜಾನೆ ಸುಮಾರು 6.30ರ ವೇಳೆಗೆ ಗಂಗಾವಳಿ ಸೇತುವೆಯ ಕೆಳಭಾಗದಲ್ಲಿ ನದಿ ದಡಕ್ಕೆ ಮೃತದೇಹವೊಂದು ತೇಲಿ ಬಂದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಕೂಡಲೇ ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೃತದೇಹವು ಸುಮಾರು 35 ವರ್ಷ ವಯಸ್ಸಿನ ವ್ಯಕ್ತಿಯದ್ದಾಗಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ ಮೃತನ ಗುರುತು ಹಾಗೂ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹವು ನದಿಯಲ್ಲಿ ತೇಲಿ ಬಂದು ದಡಕ್ಕೆ ಸೇರಿರುವ ಹಿನ್ನೆಲೆಯಲ್ಲಿ, ನೀರಿನಲ್ಲಿ ಕೊಚ್ಚಿಕೊಂಡು ಬಂದಿರಬಹುದೇ ಅಥವಾ ಬೇರೆ ಯಾವುದಾದರೂ ಕಾರಣದಿಂದ ಮೃತಪಟ್ಟಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ಪರಿಶೀಲಿಸಿ, ಅಗತ್ಯ ಕಾನೂನು ಕ್ರಮ ಕೈಗೊಂಡ ಬಳಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದ್ದು, ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿದುಬರುವ ಸಾಧ್ಯತೆ ಇದೆ.
ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇತ್ತೀಚೆಗೆ ಯಾರಾದರೂ ಕಾಣೆಯಾಗಿರುವ ಬಗ್ಗೆ ಮಾಹಿತಿ ಇದೆಯೇ ಎಂಬುದರ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ. ಸ್ಥಳೀಯರ ಪ್ರಕಾರ, ಮೃತ ವ್ಯಕ್ತಿ ಕಾಣೆಯಾಗಿದ್ದ ವ್ಯಕ್ತಿಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಮೃತದೇಹದ ಗುರುತು ಪತ್ತೆ ಹಾಗೂ ಸಾವಿನ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.
ಮೃತ ವ್ಯಕ್ತಿಯ ಕೊರಳಿನಲ್ಲಿ ಆಂಜನೇಯ ಮೂರ್ತಿಯಿರುವ ಲಾಕೆಟ್ ಇದ್ದು, ಕೈಗೆ ಕಪ್ಪುದಾರ ಕಟ್ಟಿರುವುದು ಕಂಡುಬಂದಿದೆ. ಈ ಗುರುತುಗಳ ಆಧಾರದ ಮೇಲೆ ಮೃತನ ಗುರುತು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.
