ಕರಾವಳಿ ವಾಯ್ಸ್ ನ್ಯೂಸ್
ಉಡುಪಿ: ಯಲ್ಲಾಪುರ ತಾಲೂಕಿನ ಮಂಚಿಕೇರಿಯಲ್ಲಿ ಮೀನು ಮಾರಾಟ ಮಾಡುತ್ತಿದ್ದ ಮಹಿಳೆ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದ ಬೆನ್ನಲ್ಲೇ, ಬೈಂದೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಜಯ ಗಣೇಶ ಭಂಡಾರ್ಕರ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ, ಅವರು ಈ ಹಿಂದೆ ಸೇವೆ ಸಲ್ಲಿಸುತ್ತಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವಾಪಸ್ ಕಳುಹಿಸಲಾಗಿದೆ.
ಮಂಚಿಕೇರಿಯ ಮಾಗೋಡು ಕ್ರಾಸ್ ಬಳಿ ಮೀನು ಮಾರಾಟ ಮಾಡುತ್ತಿದ್ದ ಅಂಕೋಲಾ ತಾಲೂಕಿನ ಬೇಲೇಕೇರಿ ಮೂಲದ ಮಹಿಳೆಯೊಂದಿಗೆ ಅಜಯ ಭಂಡಾರ್ಕರ್ ಅನುಚಿತವಾಗಿ ವರ್ತಿಸಿ, ಮೀನುಗಳಿದ್ದ ಬುಟ್ಟಿಯನ್ನು ಚೆಲ್ಲಾಡಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ವೇಳೆ ಮಧ್ಯಪ್ರವೇಶಿಸಿದ ಮತ್ತೊಬ್ಬ ಮಹಿಳೆಯ ಮೇಲೂ ಹಲ್ಲೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ಮೀನುಗಾರ ಮುಖಂಡರು, ವಿವಿಧ ಸಂಘಟನೆಗಳು ಹಾಗೂ ರಾಜಕೀಯ ಮುಖಂಡರು ಆಕ್ಷೇಪ ವ್ಯಕ್ತಪಡಿಸಿ, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.
ಈ ಬೆಳವಣಿಗೆಗಳ ನಡುವೆಯೇ ಉಡುಪಿ ಜಿಲ್ಲಾಧಿಕಾರಿ ಕಚೇರಿಯಿಂದ ಸೆ.25ರಂದು ಆದೇಶ ಹೊರಡಿಸಲಾಗಿದ್ದು, ಅಜಯ ಗಣೇಶ ಭಂಡಾರ್ಕರ್ ಅವರನ್ನು ಬ್ರಹ್ಮಾವರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹುದ್ದೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆಗೊಳಿಸಲಾಗಿದೆ. ಅಲ್ಲದೆ, ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ಅಜಯ ಭಂಡಾರ್ಕರ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ನಿಯೋಜನೆ ಮೇರೆಗೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.


