ಕರಾವಳಿ ವಾಯ್ಸ್ ನ್ಯೂಸ್
ಜೋಯಿಡಾ: ರಾಮನಗರದಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರ–ಧಾರವಾಡ ರಾಜ್ಯ ಹೆದ್ದಾರಿಯ ಮುಂಡವಾಡ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ.
ಗೋವಾ ರಾಜ್ಯದ ಪಣಜಿಯಿಂದ ಧಾರವಾಡ ಜಿಲ್ಲೆಯ ಆಳಣಾವರದ ಕಡೆಗೆ ತೆರಳುತ್ತಿದ್ದ ವ್ಯಾಗನಾರ್ ಕಾರು ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಚಾಲಕ ಅಬ್ದುಲ್ ಖಾದರ್ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಕಾರಿನಲ್ಲಿದ್ದ ದಾದು (30) ಹಾಗೂ ಹಿನಾ ಕೌಸರ್ (39) ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿ ತಕ್ಷಣವೇ ಗಾಯಾಳುಗಳನ್ನು ರಾಮನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು. ನಂತರ ಅವರ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಯ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದ ಸುದ್ದಿ ತಿಳಿದ ಕೂಡಲೇ ಖಾನಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಅತಿವೇಗ ಅಥವಾ ಚಾಲಕನ ನಿಯಂತ್ರಣ ತಪ್ಪಿರುವುದೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.
ಘಟನೆಯಿಂದ ಕೆಲಕಾಲ ರಾಮನಗರ–ಧಾರವಾಡ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ವಾಹನ ಸಂಚಾರವನ್ನು ಸುಗಮಗೊಳಿಸಿದರು. ಮೃತ ಅಬ್ದುಲ್ ಖಾದರ್ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಮತ್ತು ಪರಿಚಿತರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

