ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ವೈದ್ಯರ ಮೇಲಿನ ಹಲ್ಲೆ ಪ್ರಕರಣದ ಆರೋಪಿಗಳನ್ನು ಭಾನುವಾರದೊಳಗೆ ಬಂಧಿಸದಿದ್ದರೆ ಸೋಮವಾರದಿಂದ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಸೇವೆ ಸ್ಥಗಿತಗೊಳಿಸುವುದಾಗಿ ಜಿಲ್ಲಾ ವೈದ್ಯಾಧಿಕಾರಿಗಳ ಸಂಘ ಎಚ್ಚರಿಸಿದೆ.
ಶನಿವಾರ ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ್, ಭಟ್ಕಳ ತಾಲೂಕಿನ ಶಿರಾಲಿ ಆರೋಗ್ಯ ಕೇಂದ್ರದಲ್ಲಿ ಹೆಣ್ಣು ಮಗು ಮೃತಪಟ್ಟ ಬಳಿಕ ಕುಟುಂಬಸ್ಥರು ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ನಿಂದಿಸಿದ್ದಾರೆ. ಈ ಕುರಿತು ಎಫ್ಐಆರ್ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಆರೋಗ್ಯ ಸೇವೆ ಸ್ಥಗಿತಗೊಳಿಸಲಾಗುವುದು ಎಂದರು.
ವೈದ್ಯಾಧಿಕಾರಿ ಡಾ. ಶೃತಿ ಮಾತನಾಡಿ, ಹೆಣ್ಣು ಮಗು ಜನಿಸಿದ್ದಕ್ಕೆ ಕುಟುಂಬಸ್ಥರು ಬೇಸರ ವ್ಯಕ್ತಪಡಿಸುತ್ತಿದ್ದರು. ಮಗುವಿನ ಆರೈಕೆಯಲ್ಲಿ ತಾಯಿ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ಗಮನಿಸಿ ಸಿಬ್ಬಂದಿ ಸೂಚನೆ ನೀಡಿದ್ದರು. ಮಗುವಿನ ರಕ್ತದೊತ್ತಡ ಕುಸಿದಾಗ ತಕ್ಷಣ ಚಿಕಿತ್ಸೆ ನೀಡಿದರೂ ಮಗು ಮೃತಪಟ್ಟಿತ್ತು. ವಿಷಯ ತಿಳಿಸಿದ ಬಳಿಕ ಕುಟುಂಬಸ್ಥರು ವೈದ್ಯರು ಹಾಗೂ ನರ್ಸ್ಗಳಿಗೆ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ವಿವರಿಸಿದರು.
ವೈದ್ಯೆ ಸವಿತಾ ಮಾತನಾಡಿ, ಸಂಘದಿಂದ ದೂರು ದಾಖಲಿಸಲಾಗಿದೆ. ಈಗಾಗಲೇ ಗುತ್ತಿಗೆ ಆಧಾರದ ಮೂವರು ವೈದ್ಯರು ರಾಜೀನಾಮೆ ನೀಡಿದ್ದಾರೆ. ಜಿಲ್ಲೆಯಲ್ಲಿ ವೈದ್ಯರ ಕೊರತೆಯ ನಡುವೆಯೇ ಇಂತಹ ಘಟನೆಗಳು ವೈದ್ಯಕೀಯ ಸೇವೆಗೆ ತೊಡಕಾಗುತ್ತಿವೆ. ಆರೋಪಿಗಳ ಬಂಧನವಾಗದಿದ್ದರೆ ಸೋಮವಾರದಿಂದ ಒಪಿಡಿ ಸೇವೆ ಸ್ಥಗಿತಗೊಳಿಸಲಾಗುವುದು ಎಂದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವಕುಮಾರ್ ನಾಯ್ಕ ಮಾತನಾಡಿ, ಸರ್ಕಾರಿ ನೌಕರರು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸೂಕ್ತ ವಾತಾವರಣ ಹಾಗೂ ಆರೋಗ್ಯ ಸಿಬ್ಬಂದಿಗೆ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.


