ಕರಾವಳಿ ವಾಯ್ಸ್ ನ್ಯೂಸ್
ಮುಂಡಗೋಡ: ತಾಲೂಕಿನ ಬೆಡಸಗಾಂವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿತರಿಸಲಾದ ಪಾದರಕ್ಷೆಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು ಆರೋಪಿಸಿ ವಿದ್ಯಾರ್ಥಿಗಳು, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಪಾಲಕರು-ಪೋಷಕರು ಪಾದರಕ್ಷೆಗಳನ್ನು ತಿರಸ್ಕರಿಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಉಚಿತವಾಗಿ ವಿತರಿಸಿರುವ ಪಾದರಕ್ಷೆಗಳು ನಿಗದಿತ ಗುಣಮಟ್ಟದ ಮಾನದಂಡಕ್ಕೆ ಅನುಗುಣವಾಗಿಲ್ಲ. ಮಕ್ಕಳ ಬಳಕೆಗೆ ಯೋಗ್ಯವಾಗಿಲ್ಲ ಎಂದು ಪಾಲಕರು ಹಾಗೂ ಎಸ್ಡಿಎಂಸಿ ಸದಸ್ಯರು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ವಿದ್ಯಾರ್ಥಿಗಳು ಪಾದರಕ್ಷೆಗಳನ್ನು ಧರಿಸದೇ ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.
ಶಾಲಾ ಆವರಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿದ ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಪಾಲಕರು, ಮಕ್ಕಳಿಗೆ ಗುಣಮಟ್ಟದ ಪಾದರಕ್ಷೆಗಳನ್ನು ವಿತರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದರು. ಸರ್ಕಾರ ಮಕ್ಕಳಿಗೆ ಒದಗಿಸುವ ಸೌಲಭ್ಯಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಆಗ್ರಹಿಸಿದರು.
ಈ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪಾದರಕ್ಷೆಗಳ ಗುಣಮಟ್ಟ ಪರಿಶೀಲಿಸಬೇಕು. ಈಗಾಗಲೇ ವಿತರಿಸಿರುವ ಪಾದರಕ್ಷೆಗಳನ್ನು ಹಿಂಪಡೆದು, ಗುಣಮಟ್ಟದ ಪಾದರಕ್ಷೆಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಬೇಕು ಎಂದು ಒತ್ತಾಯಿಸಲಾಗಿದೆ.
ಪಾದರಕ್ಷೆಗಳ ಗುಣಮಟ್ಟಕ್ಕೆ ಸಂಬಂಧಿಸಿದ ಅಗತ್ಯ ದಾಖಲೆ ಹಾಗೂ ಮಾಹಿತಿಯೊಂದಿಗೆ ಲೋಕಾಯುಕ್ತರಿಗೂ ದೂರು ಸಲ್ಲಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಎಸ್ಡಿಎಂಸಿ ಸದಸ್ಯರು ಹಾಗೂ ಪಾಲಕರು ತಿಳಿಸಿದ್ದಾರೆ.


