ಕರಾವಳಿ ವಾಯ್ಸ್ ನ್ಯೂಸ್ 

ದಾಂಡೇಲಿ, ಜು. 15: ನಗರದ ಸಾಯಿನಗರದ ಉದ್ಯಾನವನದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದ್ದು, ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

Banner Ad

ಮೃತನನ್ನು ಮಂಜುನಾಥ ಮಲ್ಲೇಶ ನಿಂಬಾಳ್ಳರ (23) ಎಂದು ಗುರುತಿಸಲಾಗಿದೆ. ಈತ ಮೂಲತಃ ನಗರದ ಗಾಂಧಿನಗರದ ರೈಲ್ವೆ ಹಳಿ ಸಮೀಪದ ನಿವಾಸಿಯಾಗಿದ್ದು, ಕಳೆದ ಮೂರು-ನಾಲ್ಕು ವರ್ಷಗಳಿಂದ ತಾಯಿ ಹಾಗೂ ಸಹೋದರಿಯರೊಂದಿಗೆ ಬೆಂಗಳೂರಿನಲ್ಲಿ ವಾಸಿಸುತ್ತಿದ್ದನು. ಎರಡು-ಮೂರು ದಿನಗಳ ಹಿಂದೆ ದಾಂಡೇಲಿಗೆ ಬಂದಿದ್ದ ಎಂದು ತಿಳಿದುಬಂದಿದೆ.

ಬುಧವಾರ ಬೆಳಿಗ್ಗೆ ಉದ್ಯಾನವನದಲ್ಲಿ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ಪಡೆದ ದಾಂಡೇಲಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

 

 

 

Please Share: