ಕರಾವಳಿ ವಾಯ್ಸ್ ನ್ಯೂಸ್ 

ಅಂಕೋಲಾ: ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಅನುಕೂಲವಾಗುವಂತೆ ಅಂಕೋಲಾದಲ್ಲಿ ಸುಮಾರು ₹2 ಕೋಟಿ ವೆಚ್ಚದಲ್ಲಿ ಆಧುನಿಕ ಡಿಜಿಟಲ್ ಗ್ರಂಥಾಲಯ ನಿರ್ಮಿಸಲಾಗುವುದು ಎಂದು ಸಹಕಾರ ಇಲಾಖೆ ಸಚಿವ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಘೋಷಿಸಿದರು.

Banner Ad

ಅಂಕೋಲಾದ ನಾಡವರ ಸಭಾಭವನದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತಾವಿತ ಡಿಜಿಟಲ್ ಗ್ರಂಥಾಲಯಕ್ಕೆ ಜಿಲ್ಲಾ ಖನಿಜ ಪ್ರತಿಷ್ಠಾನ (ಡಿಎಂಎಫ್) ನಿಧಿಯಿಂದ ₹1 ಕೋಟಿ ಹಾಗೂ ಉಳಿದ ಮೊತ್ತವನ್ನು ಶಾಸಕರ ಅನುದಾನದ ಮೂಲಕ ಒದಗಿಸಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಈ ಗ್ರಂಥಾಲಯವು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿ ಮಹತ್ವದ ನೆರವಾಗಲಿದೆ ಎಂದರು.

ಇದೇ ವೇಳೆ ಶಿಕ್ಷಕರ ಪ್ರಾಮಾಣಿಕ ಸೇವೆ ಹಾಗೂ ಪರಿಶ್ರಮದಿಂದ ಉತ್ತರ ಕನ್ನಡ ಜಿಲ್ಲೆ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮೂರನೇ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ ಎಂದು ಸವದಿ ಹೇಳಿದರು. ಶಿಕ್ಷಕರು ಕೇವಲ ಸಂಬಳಕ್ಕಾಗಿ ಕೆಲಸ ಮಾಡುವವರಲ್ಲ. ಸಮಾಜ ನಿರ್ಮಾಣದಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಶಿಕ್ಷಕರ ಸೇವೆಯನ್ನು ಶ್ಲಾಘಿಸಿದರು.

ಇತ್ತೀಚಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿರುವುದು, ಸರಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ ಎಂದರು.

ಶಿಕ್ಷಕರು ಯಾವುದೇ ಅಡಚಣೆಗಳಿಗೆ ಜಗ್ಗದೆ ಸಮಾಜ ನಿರ್ಮಾಣದ ತಮ್ಮ ಜವಾಬ್ದಾರಿಯನ್ನು ನಿರಂತರವಾಗಿ ನಿರ್ವಹಿಸುತ್ತಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ ಕೆ. ಸೈಲ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ, ಜಿ.ಪಂ. ಸಿಇಒ ಡಾ. ದಿಲೀಷ್ ಶಶಿ, ಎಸ್ಪಿ ದೀಪನ್ ಎಂ.ಎನ್., ಡಿಡಿಪಿಐ ಲತಾ ನಾಯಕ ಸೇರಿದಂತೆ ಅಧಿಕಾರಿಗಳು, ಶಿಕ್ಷಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

 

 

 

Please Share: